ಬೆಂಗಳೂರಿನ ಅಂಧ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ, ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಎಂಬುವವರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.
ಅಂಧ್ರಹಳ್ಳಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಕ್ಲೀನ್ ಮಾಡಿಸಲಾಗಿದೆ. ಒಬ್ಬ ವಿದ್ಯಾರ್ಥಿ ಕ್ಲೀನಿಂಗ್ ದ್ರಾವಣ ಸುರಿಯುತ್ತಿದ್ದರೆ, ಮತ್ತೊಬ್ಬ ಪೊರಕೆ ಹಿಡಿದು ನೆಲ ಗುಡಿಸುತ್ತಿದ್ದನು. ಇದರ ವಿಡಿಯೋವನ್ನು ಯಾರೋ ಒಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲದೇ, ಅದರ ವಿಡಿಯೋಗಳು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯದ ಅಂಧ್ರಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ್ದ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಇದನ್ನು ಓದಿದ್ದೀರಾ? ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ: ಕೋಲಾರ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ
ಇದು ಸುದ್ದಿಯಾಗುತ್ತಿದ್ದಂತೆಯೇ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶಾಲೆಗೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್ ಅಶೋಕ್
ಘಟನೆ ವರದಿಯಾಗುತ್ತಿದ್ದಂತೆಯೇ ಅಂಧ್ರಹಳ್ಳಿ ಸರ್ಕಾರಿ ಶಾಲೆಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಸುಮಾರು 640ರಷ್ಟು ಮಕ್ಕಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅದರಲ್ಲಿ ಹೆಚ್ಚಿನವರು ಎಸ್‌ಸಿ-ಎಸ್‌ಟಿ ಸಮುದಾಯದ ಮಂದಿಯೇ ಇದ್ದಾರೆ. ಕೋಲಾರದ ಘಟನೆಯ ನಂತರವೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸರ್ಕಾರ ಈ ರೀತಿಯ ಘಟನೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ; ಡಿಸಿಎಂ ಡಿ ಕೆ ಶಿವಕುಮಾರ್
ಘಟನೆಯ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, “ಘಟನೆ ಸಂಬಂಧ ಸಭೆ ಕರೆದಿದ್ದೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ. ಶಾಲಾ ಮಕ್ಕಳನ್ನು ಯಾರೂ ದುರುಪಯೋಗ ಮಾಡಿಕೊಳ್ಳಬಾರದು. ಎನ್‌ಎಸ್‌ಎಸ್ ಇದ್ದಾಗ ಗಿಡ ನೆಡುವುದು, ಸ್ವಚ್ಛತೆ ಮಾಡುವ ಕೆಲಸ ಮಾಡುತ್ತಿದ್ದರು. ಆದರೆ ಶೌಚಾಲಯ ಸ್ವಚ್ಛತೆ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ” ಎಂದು ಹೇಳಿದರು.
“ಮಕ್ಕಳಿಗೆ ಶಕ್ತಿಕೊಡುವ ಕೆಲಸ ಮಾಡಬೇಕು. ಶಾಲೆಯಲ್ಲಿ ಕಮಿಟಿ ಇದೆ. ಸ್ವಚ್ಛತೆ ಮಾಡುವ ಸಂದರ್ಭದಲ್ಲಿ ಅವರು ಕ್ರಮ ವಹಿಸಬೇಕು. ಮಕ್ಕಳನ್ನು ದುರುಪಯೋಗ ಮಾಡುವುದನ್ನು ತಡೆಯಬೇಕಿದೆ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ” ಎಂದರು.