“ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ ಸಹಯೋಗದಿಂದ ಕೆಲಸ ಮಾಡಬೇಕು” ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
‘ಬೆಂಗಳೂರು ಸಿಟಿ ರೌಂಡ್ಸ್’ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಗರದಾದ್ಯಂತ ಇರುವ ಒಣ ಮರಗಳು, ರೆಂಬೆ-ಕೊಂಬೆಗಳನ್ನು ಗುರುತಿಸಿ ಅನಾಹುತಕ್ಕೆ ಮೊದಲು ತೆರವುಗೊಳಿಸಲು ಸೂಚಿಸಿದ್ದೇವೆ. ಮೆಟ್ರೋ ಕಾಮಗಾರಿ, ಫ್ಲೈ ಓವರ್ ಸೇರಿ ಕಾಮಗಾರಿಗಳ ತ್ಯಾಜ್ಯವಸ್ತು(ಡೆಬ್ರಿ)ಗಳನ್ನು ತೆರವುಗೊಳಿಸಲು ಸ್ಪಷ್ಟ ನಿರ್ದೇಶನ ನೀಡಿದ್ದೇವೆ” ಎಂದು ತಿಳಿಸಿದರು.
“ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ” ಎಂದರು.
“ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
“ಹಿಂದಿನ ಬಿಜೆಪಿ ಸರ್ಕಾರ ಜನವರಿ 2023ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೂ ಕೇವಲ ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥ ಗೊಳಿಸಲಾಗುವುದು. 12.15 ಕಿಮೀ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ” ಎಂದು ಸಿಎಂ ಮಾಹಿತಿ ನೀಡಿದರು.
“ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
