- ₹3,00,000 ಕೋಟಿಗೂ ಹೆಚ್ಚು ಸಾಲ ಮಾಡಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದ್ದ ಬಿಜೆಪಿ ಸರ್ಕಾರ
- ಕಾಂಗ್ರೆಸ್ ಸರ್ಕಾರ ಯಾವುದೇ ಸಾಲ ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ?
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ 5 ಗ್ಯಾರಂಟಿಗಳನ್ನು ಪೂರೈಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಆಸ್ತಿ ತೆರಿಗೆಯನ್ನು ಹೆಚ್ಚಿಸಲು ಕೈಗೊಂಡಿರುವ ನಿರ್ಧಾರ ನಿಜಕ್ಕೂ ನಾಚಿಕೆಗೇಡಿತನದ ಪರಮಾವಧಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿಗಳು ಎಲ್ಲಿಯೂ ಶೂನ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇಲ್ಲ. ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಸಾಧಿಸಿ ರಾಜಸ್ವ ಸಂಗ್ರಹ ಹೆಚ್ಚಿಸಿ, ಸಂಪನ್ಮೂಲ ಕ್ರೋಡೀಕರಣಗೊಳಿಸುವ ತಾಕತ್ತು ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ” ಎಂದು ಪ್ರಶ್ನಿಸಿದರು.
“ಚುನಾವಣಾ ಅಕ್ರಮಗಳಿಗಾಗಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ವ್ಯಯ ಮಾಡಿರುವ ಕಾಂಗ್ರೆಸ್ ಪಕ್ಷ ಒಂದು ಕಡೆಯಾದರೆ, ಹಿಂದಿನ ಬಿಜೆಪಿ ಸರ್ಕಾರ ₹3,00,000 ಕೋಟಿಗೂ ಹೆಚ್ಚು ಸಾಲವನ್ನು ಮಾಡಿ ರಾಜ್ಯದ ಬೊಕ್ಕಸವನ್ನು ಬರ್ಬಾದ್ ಮಾಡಿದೆ. ಕಾಂಗ್ರೆಸ್ ಸರ್ಕಾರವು ಯಾವುದೇ ಸಾಲಗಳನ್ನು ಪಡೆಯದೆ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಿದೆಯೇ?” ಜಗದೀಶ್ ವಿ ಸದಂ ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೆತ್‌ನೋಟ್ ಬರೆದಿಟ್ಟು, ಟವೆಲ್‌ನಿಂದ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
“ಒಂದು ಕೈಯಲ್ಲಿ ಉಚಿತ ಕೊಡುಗೆಗಳನ್ನು ನೀಡಿ ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ರೀತಿಯಲ್ಲಿ ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಿದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ತೀವ್ರ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ” ಎಂದು ಸರ್ಕಾರವನ್ನು ಎಚ್ಚರಿಸಿದರು.