ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್‌ಎಸ್‌ಎಸ್ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
ಬಿಜೆಪಿಯ ರಾಷ್ಟ್ರೀಯ ಸಂಘಟನೆಯ ಕಾರ್ಯದರ್ಶಿ ಅರುಣ್ ಸಿಂಗ್, ಸಂಜಯ್ ಮಯೂಖ್ ಮತ್ತು ಓಂ ಪಾಠಕ್ ಸೇರಿದಂತೆ ಬಿಜೆಪಿ ನಾಯಕರ ನಿಯೋಗ ಚುನಾವಣಾ ಸಮಿತಿಯನ್ನು ಸಂಪರ್ಕಿಸಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ. ‘ನಕಲಿ’ ಸಂಘಟನೆಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡುವಂತೆ ಒತ್ತಾಯಿಸಿದೆ.
ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್-ಬಿಜೆಪಿ ವಿಷದಂತೆ, ವಿಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು: ಮಲ್ಲಿಕಾರ್ಜುನ ಖರ್ಗೆ
ಈ ಆರೋಪದ ಬಗ್ಗೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆರ್‌ಎಸ್‌ಎಸ್‌ನ ಹೆಸರನ್ನು ನೋಂದಾಯಿಸದೇ ಇರುವ ಅಸಿಸ್ಟೆಂಟ್ ರಿಜಿಸ್ಟ್ರಾರ್ ಆಫ್ ಸೊಸೈಟಿಗಳ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ತನ್ನ ಅರ್ಜಿಯನ್ನು ವಜಾಗೊಳಿಸಿದ್ದರೂ, ಗೊಂದಲ ಸೃಷ್ಟಿಸಲು ಸಂಘಟನೆಯು ಕಾನೂನುಬಾಹಿರವಾಗಿ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ 1925 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಾವಣೆಯಾಗಿದೆ ಎಂದಿದ್ದಾರೆ.
“ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಆಜ್ಞೆಯ ಮೇರೆಗೆ ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಹೆಸರಿನಲ್ಲಿ ನಕಲಿ ಸಂಘಟನೆಯನ್ನು ಸೃಷ್ಟಿಸಲಾಗಿದೆ. ಗೊಂದಲವನ್ನು ಸೃಷ್ಟಿಸಲು ಮತ್ತು ದೇಶದ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಸಿಂಗ್ ಆರೋಪಿಸಿದ್ದಾರೆ.
ಕಾಂಗ್ರೆಸ್‌ನ ಸೇವಾದಳದ ಮುಖ್ಯಸ್ಥರು ಈ “ನಕಲಿ” ಸಂಘಟನೆಯ ಮುಖ್ಯಸ್ಥರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯನ್ನು ಸೋಲಿಸಬೇಕು ಎಂದು ಹೇಳಿಕೊಂಡು ಈ ಸಂಘಟನೆಯು ಜನರನ್ನು ತಲುಪುತ್ತಿದೆ ಎಂದು ಸಿಂಗ್ ಹೇಳಿದರು.