ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ ಎಂದು ಬಿಜೆಪಿಗರನ್ನು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ ಎಂದು ಜರೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
‘ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ’ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುತ್ತಿದೆ. ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಅದು ಕಡಿಮೆಯೇ? ಏನು ಮಾಡಿಲ್ಲ ಎಂದರೆ ಏನು? ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದೆ” ಎಂದರು.
“ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಇದನ್ನು ಓದಿದ್ದೀರಾ? ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ; ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರೆ
“ನಿನ್ನೆ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿರಿಸಿದ್ದೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.
