ಸ್ವಪಕ್ಷೀಯ ನಾಯಕರ ವಿರುದ್ಧವೇ ಬಹಿರಂಗವಾಗಿ ವಾಗ್ದಾಳಿ ನಡೆಸಿ, ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಹಿನ್ನೆಲೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ಗುರುವಾರ ನೋಟಿಸ್ ಜಾರಿ ಮಾಡಿದೆ.
ನೋಟಿಸ್‌ನಲ್ಲಿ ಏನಿದೆ?
“ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ತಾವು ಪದೇ ಪದೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಸುದ್ದಿಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿ, ತಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸನ್ನು ನೀಡಲಾಗಿದೆ. ಈ ನೋಟಿಸ್ ತಲುಪಿದ ಒಂದು ವಾರದೊಳಗಾಗಿ ತಾವು ಉತ್ತರವನ್ನು ಲಿಖಿತ ರೂಪದಲ್ಲಿ ನೀಡಬೇಕೆಂದು ಸೂಚಿಸಲಾಗಿದೆ” ಎಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನೀಡಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ
ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ, ಪ್ರಧಾನಿ ಮೋದಿ ಅವರನ್ನು ಬೀದಿ ಬೀದಿ ಸುತ್ತಿಸಿದ್ದೇ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಆರೋಪಿಸಿದ್ದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ. ಕೆ ಸುಧಾಕರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಇದು ಬಿಜೆಪಿ ವಿರುದ್ಧ ಆಂತರಿಕ ಚರ್ಚೆಗೂ ಕಾರಣವಾಗಿತ್ತು ಮತ್ತು ಮುಜುಗರ ತರಿಸಿತ್ತು. ಹಾಗಾಗಿ ಸ್ವಪಕ್ಷೀಯರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವುದಕ್ಕೆ ಕಡಿವಾಣ ಹಾಕಲು ಬಿಜೆಪಿ ಮುಂದಾಗಿದೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ರಾಜೀನಾಮೆಗೆ ರೇಣುಕಾಚಾರ್ಯ ಪಟ್ಟು