- ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಶ್ರೀನಿವಾಸ್ ಶೆಟ್ಟಿ
- ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಹಾಲಿ ಶಾಸಕ
ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಯಸ್ಸಿನ ನೆಪವೊಡ್ಡಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಶ್ರೀನಿವಾಸ್ ಶೆಟ್ಟಿ ಅವರ ನಡೆಗೆ ಸಾಮಾಜಿಕ ಜಾಲಜಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಕುಂದಾಪುರ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ಬಾರಿ ಬಿಜೆಪಿಯಿಂದ ಮತ್ತು ಒಂದು ಬಾರಿ ಪಕ್ಷೇತರರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು.
”ನಾನು ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ” ಎಂದು ಶ್ರೀನಿವಾಸ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲ ಸಮುದಾಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗಾಂಧಿ ಪ್ರತಿಮೆ ಎದುರು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದ ಅಡಗೂರು ಎಚ್ ವಿಶ್ವನಾಥ್; ಬಿಜೆಪಿ ವಿರುದ್ಧ ಕಿಡಿ
”ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಎಲ್ಲ ವರ್ಗದ ಮತದಾರರ ನೋವು, ನಲಿವುಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ” ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
”ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರಋಣಿ. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ನಾಯಕರ ಪಕ್ಷಾಂತರ, ಸ್ವಪಕ್ಷೀಯರ ಟಿಕೆಟ್ ಗುದ್ದಾಟ, ಚುನಾವಣಾ ರಾಜಕೀಯ ನಿವೃತ್ತಿ ಸೇರಿದಂತೆ ಅನೇಕ ಬೆಳವಣಿಗೆಗೆ ರಾಜ್ಯ ಸಾಕ್ಷಿಯಾಗಿದೆ.