ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು, ಕಾಂಗ್ರೆಸ್‌ನ 50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರೂ. ಆಫರ್ ನೀಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ವಿರುದ್ಧ ಆರೋಪಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿ ಎಂದೂ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಬಿಜೆಪಿಯವರು ಸಾಕಷ್ಟು ಭ್ರಷ್ಟಾಚಾರ ಮಾಡಿ ಲಂಚದಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡಿದ್ದಾರೆ. ಆ ಹಣದಿಂದ ನಮ್ಮ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಕೊಟ್ಟು ಖರೀದಿ ಮಾಡಲು ಯತ್ನಿಸಿದ್ದರು. ಆದರೆ, ನಮ್ಮ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗಿಲ್ಲ. ಹಾಗಾಗಿ ನನ್ನ ಮೇಲೆ ಮುಡಾ ಪ್ರಕರಣ ಎಂದು ಸುಳ್ಳು ಆರೋಪ ಮಾಡಿ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ” ಎಂದಿದ್ದಾರೆ.
“ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂ.ಹಣ ಕೊಟ್ಟು ಖರೀದಿಸಲು ಯಡಿಯೂರಪ್ಪ ಏನು ಪ್ರಿಂಟ್ ಮಾಡಿದ್ದಾರಾ? ಬೊಮ್ಮಾಯಿ, ಅಶೋಕ್, ವಿಜಯೇಂದ್ರ ಹಣ ಪ್ರಿಂಟ್ ಮಾಡಿದ್ದಾರಾ? ಎಲ್ಲವೂ ಭ್ರಷ್ಟಾಚಾರ ಲಂಚದಿಂದ ಸಂಪಾದನೆ ಮಾಡಿರುವ ಹಣ” ಎಂದಿದ್ದಾರೆ.
ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ?… pic.twitter.com/1KNnilkaly
— Siddaramaiah (@siddaramaiah) November 13, 2024
“ಕೇಂದ್ರ ಸರ್ಕಾರ ಬಿಜೆಪಿ ಆಧಿಕಾರದಲ್ಲಿ ಇಲ್ಲದ ರಾಜ್ಯಗಳ ಮುಖ್ಯಮಂತ್ರಿಗಳ ಮೇಲೆ ಇಡಿ, ಐಟಿ, ಸಿಬಿಐ ಬಳಸಿಕೊಂಡು ತೊಂದರೆ ಕೊಡುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೂ ಸುಳ್ಳು ಪ್ರಕರಣ ಹಾಕಿ ತೊಂದರೆ ಕೊಟ್ಟರು. ಈಗ ನನ್ನ ಮೇಲೂ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ಕೊಡುತ್ತಿದ್ದಾರೆ” ಎಂದು ಹೇಳಿದ್ದಾರೆ.
“ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಂಕರ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ 1.20 ಲಕ್ಷ ಕೋಟಿ ರೂ. ನೀಡಿದೆ. ಇಂದು ನರಸೀಪುರದಲ್ಲಿ 470 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ” ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, “ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ. ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ” ಎಂದಿದ್ದಾರೆ.
“ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ” ಎಂದು ಹೇಳಿದ್ದಾರೆ.
ಮಾನ್ಯ @siddaramaiah ನವರೇ,
— Vijayendra Yediyurappa (@BYVijayendra) November 14, 2024
ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ.
ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ… pic.twitter.com/DBSk1GnwEW
“ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ,
ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ” ಎಂದಿದ್ದಾರೆ.