“ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ನಿಲ್ಲಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿಗಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಿರ್ಣಯ ಮಂಡಿಸಿ ಸದನದಲ್ಲಿ ಅಂಗೀಕಾರ ಮಾಡಲಾಗಿದೆ. ಇದನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ಬಂದಿಲ್ಲ” ಎಂದು ತಿಳಿಸಿದರು.
“ನಾವು ಕಾನೂನು ಚೌಕಟ್ಟಿನಲ್ಲೇ ನಿರ್ಣಯ ಮಂಡಿಸಿದ್ದೇವೆ. ಇದೇ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ, ಸಿದ್ದರಾಮಯ್ಯ ಅವರು ಮತ್ತು ಕೃಷ್ಣಬೈರೇಗೌಡರು ಮಾಡಿದ ಪ್ರಸ್ತಾವನೆಗೆ ಉತ್ತರ ಕೊಡುತ್ತಾ ನಾವೆಲ್ಲಾ ಸೇರಿ ಒಟ್ಟಿಗೆ ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದರು. ಅವರ ಮಾತಿನಂತೆ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ನೋವನ್ನು ಹೇಳಿದ್ದೇವೆ” ಎಂದರು.
ರಾಜ್ಯಸಭೆ ಚುನಾವಣೆ ಸಂಬಂಧ ಕುಮಾರಸ್ವಾಮಿ ಮತ್ತು ಅಮಿತ್ ಶಾ ಭೇಟಿ ವಿಚಾರ ಕೇಳಿದಾಗ, “ಇಬ್ಬರೂ ಏನೇನು ಚರ್ಚೆ ಮಾಡಿದ್ದಾರೆ ಎನ್ನುವ ಅರಿವು ನಮಗಿದೆ. ಯಾವ, ಯಾವ ಶಾಸಕರಿಗೆ ದೂರವಾಣಿ ಕರೆ ಮಾಡಿ ಏನೇನು ಮಾತನಾಡಿದ್ದಾರೆ ಎನ್ನುವುದು ಗೊತ್ತಿದೆ. ಶಾಸಕರ ಸಂಬಂಧಿಕರು, ಸ್ನೇಹಿತರ ಮೂಲಕ ಏನೇನು ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ನಮಗೆ ತಿಳಿದಿದೆ. ನಮ್ಮ ಬತ್ತಳಿಕೆಯಲ್ಲಿ ಏನಿದೆ ಎನ್ನುವುದು ಅವರಿಗೆ ಗೊತ್ತಿದೆ. ಅವರ ಬತ್ತಳಿಕೆಯಲ್ಲಿ ಏನಿದೆ ಎನ್ನುವುದು ನಮಗೆ ಗೊತ್ತಿದೆ. ಈ ವಿಚಾರಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಎಲ್ಲರ ಮೇಲೆ ನಾವು ನಿಗಾ ಇಟ್ಟಿದ್ದೇವೆ” ಎಂದರು.
ಇದನ್ನು ಓದಿದ್ದೀರಾ? ಇಂದ್ರಾಣಿ ಮುಖರ್ಜಿ ವೆಬ್ ಸರಣಿ: ಸಿಬಿಐಗೆ ಪ್ರದರ್ಶನ ಏರ್ಪಡಿಸಿ; ನೆಟ್‌ಫ್ಲಿಕ್ಸ್‌ಗೆ ಬಾಂಬೆ ಹೈಕೋರ್ಟ್ ಸೂಚನೆ
ಐಟಿ ಕಂಪೆನಿಗಳಲ್ಲಿ ಕನ್ನಡ ಭಾಷಿಕರಿಗೆ ಇಂತಿಷ್ಟು ಹುದ್ದೆಗಳನ್ನು ಮೀಸಲಿಡಬೇಕು ಎನ್ನುವ ವಿಚಾರವಾಗಿ ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ. ಯಾವುದೇ ನಿಯಮಗಳು ಇಲ್ಲ. ಒಂದಷ್ಟು ಕನ್ನಡ ಸಂಘಟನೆಯ ಸದಸ್ಯರು ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ” ಎಂದರು.
