ಇತ್ತೀಚೆಗಷ್ಟೇ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಳಿಕ ಈಗ ರಾಜ್ಯದ ರಾಜ್ಯಪಾಲರ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿರುವುದಾಗಿ ವರದಿಯಾಗಿದೆ. ಕರೆ ಬಂದ ಕೂಡಲೇ ಅಲರ್ಟ್ ಆದ ನಗರದ ಪೊಲೀಸರು, ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಕರೆ ತಂದು ರಾಜಭವನವನ್ನು ಪರಿಶೀಲನೆ ನಡೆಸಿದ್ದಾರೆ.
ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಅಪರಿಚಿತನ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.
ಸದ್ಯ ಕರೆ ಮಾಡಿದ ವ್ಯಕ್ತಿಯ ಫೋನ್ ನಂಬರ್ ಟ್ರ್ಯಾಕ್ ಮಾಡುತ್ತಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಿಂದ ಕರೆ ಮಾಡಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ, “ಕಿಡಿಗೇಡಿಗಳು ಎನ್‌ಐಎ ಕಂಟ್ರೋಲ್ ರೂಮಿಗೆ ಕರೆ ಮಾಡಿದ್ದು, ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕೇಂದ್ರ ವಿಭಾಗದ ಬಾಂಬ್ ಸ್ಕ್ವಾಡ್ ಪೊಲೀಸರು ಪರಿಶೀಲಿಸಿದ್ದಾರೆ. ಅಲ್ಲಿ ಏನೂ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ. ಕರೆ ಮಾಡಿದ ವ್ಯಕ್ತಿಯ ವಿವರವನ್ನು ಪತ್ತೆ ಹಚ್ಚುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಸುಮಾರು 48 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಬೆಂಗಳೂರು ನಗರದ ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ತಿಳಿದು ಬಂದಿತ್ತು.
ಗಂಭೀರವಾಗಿ ಪರಿಗಣಿಸಿಲ್ಲವೇ ಗೃಹ ಇಲಾಖೆ?
ರಾಜಧಾನಿ ಬೆಂಗಳೂರಿನಲ್ಲಿ ಈ ರೀತಿ ಬಾಂಬ್ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದರೂ, ಪೊಲೀಸ್ ಹಾಗೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲವೇ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರತೊಡಗಿದೆ.
ಶಾಲೆಗಳ ಬಳಿಕ ಇದೀಗ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದರೂ, ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಾಧ್ಯವಾಗಿಲ್ಲ. ಬೆದರಿಕೆ ಕರೆ ಮಾಡುವ ಮೂಲಕ ಸಮಾಜದಲ್ಲಿ ಒಂದು ರೀತಿ ಭಯದ ವಾತಾವರಣ ನಿರ್ಮಿಸಲು ಯತ್ನಿಸುತ್ತಿರುವ ದುಷ್ಕರ್ಮಿಳ ಹೆಡೆಮುರಿ ಕಟ್ಟುವಂತೆ ಸಾರ್ವಜನಿಕರಿಂದ ಆಗ್ರಹಗಳು ಕೇಳಿ ಬಂದಿದೆ.