ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲ್ಯಾನ್ ಮಾಡಿದ್ದರು. ಹೀಗಾಗಿ ಜೊತೆಯಲ್ಲಿದ್ದುಕೊಂಡೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕೈಗೊಂಡು ಮಾತನಾಡಿದ ಅವರು, “ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಬಾಯಿ ಬಾಯಿ ಆಗಿದ್ದಾರೆ” ಎಂದು ಲೇವಡಿ ಮಾಡಿದರು.
“ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಸಿಕ್ಕಿದೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ” ಎಂದು ಮನವಿ ಮಾಡಿದರು.
“ನರೇಂದ್ರ ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿ ಯವರೇ? ನಾನು ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗಲ್ಲ, ಜಗ್ಗಲ್ಲ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ” ಎಂದು ಎಚ್ಚರಿಸಿದರು.
ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ: ಆರ್ ಅಶೋಕ್
“ಚೆಕ್‌ನಲ್ಲಿ ಲಂಚ ಪಡೆದ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡು ಕೂತಿದ್ದ ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ ಕೇಳಿ. ಚೆಕ್‌ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ. ಅಧಿಕಾರ ಇದ್ದಾಗ ಕೇವಲ ಭ್ರಷ್ಟಾಚಾರ ಆಚರಿಸಿ, ಹಣ ಲೂಟಿ ಮಾಡಿ ಮನೆಗೆ ಹೋದರು. ಈಗ ಜಾತಿ-ಧರ್ಮದ ಹೆಸರಿನಲ್ಲಿ ಬಡವರನ್ನು ಪರಸ್ಪರ ಎತ್ತಿ ಕಟ್ಟಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.
“ಬಸವರಾಜ ಬೊಮ್ಮಾಯಿ ಅವರು ಅವರ ಮಗನಿಗೆ ಓಟು ಕೇಳಲು ಯಾವ ನೈತಿಕತೆ ಇದೆ? ಮಾತೆತ್ತಿದರೆ ದಮ್ಮು, ತಾಖತ್ತು ಎನ್ನುವ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕಾಗಲಿ, ಕ್ಷೇತ್ರಕ್ಕಾಗಲಿ ಏನು ಕೊಟ್ಟಿದ್ದಾರೆ ಹೇಳಿ? ಬಸವರಾಜ ಬೊಮ್ಮಾಯಿಯನ್ನು ಶಕುನಿ ಎಂದು ಈಗಷ್ಟೆ ಎಲ್ಲಾ ಹೇಳಿದರು. ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತವರು ರಾಜಕಾರಣದಲ್ಲಿ ಇರಬಾರದು. ಆದ್ದರಿಂದ ಪಠಾಣ್ ಅವರನ್ನು ಗೆಲ್ಲಿಸಿ ಕಳುಹಿಸಿ. ಅಜ್ಜಂಪೀರ್ ಖಾದ್ರಿ ಅವರಿಗೂ ಒಳ್ಳೆಯ ಅವಕಾಶ ಕಲ್ಪಿಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.