ಮೋದಿ ಉಪನಾಮ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ ಜೈಲು ಶಿಕ್ಷೆಗೆ ಸಲ್ಲಿಸಲಾಗಿದ್ದ ತಡೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಆಗಸ್ಟ್ 4ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿರುವ ಸುಪ್ರೀಂ ಕೋರ್ಟ್, ಇದೇ ವೇಳೆ ಅರ್ಜಿದಾರ ಪೂರ್ಣೇಶ್ ಮೋದಿ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ 10 ದಿನಗಳಲ್ಲಿ ನೋಟಿಸ್‌ಗೆ ಉತ್ತರಿಸುವಂತೆಯೂ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ವಿಚಾರಣೆ ನಡೆಸಿತು. ರಾಹುಲ್ ಗಾಂಧಿ ಪರವಾಗಿ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಏನಿದು ಪ್ರಕರಣ?
ಪ್ರಧಾನಿ ನರೇಂದ್ರ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್ ನ್ಯಾಯಾಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿತು.
ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಕಳೆದ ಜುಲೈ 7 ರಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ನಡುವೆಯೇ ಲೋಕಸಭಾ ಸ್ಪೀಕರ್ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರೂ ಆದ ರಾಹುಲ್ ಗಾಂಧಿಯ ಸಂಸದ ಸ್ಥಾನವನ್ನು ಅನರ್ಹಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.