ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು ಕೇಂದ್ರ ಸರ್ಕಾರ 2019ರಲ್ಲಿ ರದ್ದು ಗೊಳಿಸಿತ್ತು. ರದ್ದುಗೊಳಿಸಿರುವುದನ್ನು ಸಮರ್ಥಿಸಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟಿನ ಮುಖ್ಯ ನಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು, ಆಗಸ್ಟ್ 2ರಿಂದ ದಿನನಿತ್ಯವೂ ಅರ್ಜಿಗಳ ವಿಚಾರಣೆ ಆಲಿಸಲು ಒಪ್ಪಿಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ, ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ 20ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಸಲ್ಲಿಸಲಾಗಿದ್ದ ಅರ್ಜಿಗಳ ಪೈಕಿ ಶಾ ಫೈಸಲ್ ಹಾಗೂ ಶೆಹ್ಲಾ ರಶೀದ್ ತಮ್ಮ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.
ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು ಸಾಂವಿಧಾನಿಕ ಪೀಠದ ಇತರ ಸದಸ್ಯರಾಗಿ, ವಿಚಾರಣೆ ಆಲಿಸಿದರು.
370ನೇ ವಿಧಿಯನ್ನು ರದ್ದುಪಡಿಸುವ ವಿಧೇಯಕವನ್ನು ಆಗಸ್ಟ್ 5, 2019ರಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದರು. ಬಳಿಕ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರಕಿತ್ತು. ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಾಖ್ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಪರಿಗಣಿಸುವ ವಿಧಿಯನ್ನು ಅಂಗೀಕರಿಸಲಾಗಿತ್ತು.
ಸುಮಾರು ನಾಲ್ಕು ವರ್ಷಗಳ ಬಳಿಕ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಈ ವಿಷಯವನ್ನು ಕೈಗೆತ್ತಿಕೊಂಡಿದ್ದು ವಿಚಾರಣೆ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಕೇಂದ್ರ ಸರ್ಕಾರ ಈ ಹೊಸ ಅಫಿಡವಿಟ್‌ನ್ನು ಸಲ್ಲಿಸಿತ್ತು.
ತನ್ನ ಅಫಿಡವಿಟ್‌ನಲ್ಲಿ, ಕೇಂದ್ರ ಗೃಹ ಸಚಿವಾಲಯವು 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಪ್ರಗತಿ ಕಾಣುತ್ತಿದೆ. ಈ ಹಿಂದೆ ಕಲ್ಲು ತೂರಾಟದಂತಹ ಘಟನೆ ನಡೆಯುತ್ತಿದ್ದವು, ಆದರೆ ಇದೀಗ ಅಂತಹ ಘಟನೆಗಳು ನಡೆಯುತ್ತಿಲ್ಲ ಎಂದು ಹೇಳಿತ್ತು.