- ‘ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ’
- ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಧರಣಿ
ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ರಾಜಕೀಯವಾಗಿ ಚೆಲ್ಲಾಟ ಆಡುತ್ತಿವೆ ಎಂದು ರೈತ ಹೋರಾಟಗಾರ ಕುರುಬೂರು ಶಾಂತಕುಮಾರ್ ವಾಗ್ದಾಳಿ ನಡೆಸಿದರು.
ಕಲಬುರಗಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರೈತರ ಸಾಲ ವಸೂಲಿಗೆ ಬ್ಯಾಂಕ್ ಗಳು ನೀಡುವ ಕಿರುಕುಳ ನಿಲ್ಲಬೇಕು. ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಸಾಲ ಮನ್ನಾ ಮಾಡಿರುವ ರೀತಿ, ರೈತರ ಎಲ್ಲ ಬ್ಯಾಂಕು ಹಾಗೂ ಸಹಕಾರ ಸಂಘಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕು” ಎಂದು ಆಗ್ರಹಿಸಿದರು.
“ರಾಜ್ಯದ 220 ತಾಲೂಕುಗಳು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿವೆ. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ. ಬೆಳೆ ನಾಶವಾಗಿದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ” ಎಂದು ಹೇಳಿದರು.
“ಕಬ್ಬಿನ ಉತ್ಪಾದನಾ ವೆಚ್ಚ ಏರಿಕೆಯಾಗಿದೆ. ಪ್ರತಿ ಟನ್ ಕಬ್ಬಿನ ಉತ್ಪಾದನಾ ವೆಚ್ಚ 3,580 ಆಗುತ್ತದೆ. ಕೇಂದ್ರ ಸರ್ಕಾರ 3,150 ದರ ನಿಗದೆ ಮಾಡಿದೆ. ಇದನ್ನು ಕನಿಷ್ಠ ಟನ್‌ಗೆ 4,000 ರೂ. ನಿಗದಿ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’
“ಕಳೆದ ವರ್ಷದ ಹೆಚ್ಚುವರಿ 150 ರೂ. ಕಬ್ಬಿನ ಬಾಕಿ ಹಣ ಕೊಡಿಸಬೇಕು. ಬರಗಾಲ ಪೀಡಿತ ಪ್ರದೇಶದ ರೈತರಿಗೆ ಕೂಡಲೇ ಬರ ಪರಿಹಾರ ನಷ್ಟ ಎಕರೆಗೆ 25,000 ರೂ. ನೀಡಬೇಕು. ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು” ಎಂದರು.
“ಈ ಎಲ್ಲ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 23 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಹೂಗಾರ್, ರಾಜ್ಯ ಉಪಾಧ್ಯಕ್ಷ ಬಸವರಾಜ್ ಪಾಟೀಲ್, ಸಂಘಟನಾ ಕಾರ್ಯದರ್ಶಿ ಹತ್ತಹಳ್ಳಿ ದೇವರಾಜ್, ಧರ್ಮರಾಜ್ ಸಾವು, ಶರಣು ಬಿಲ್ಲದ್ ಸೇರಿದಂತೆ ಇತರರು ಇದ್ದರು.