ದಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ತಮ್ಮ ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಅಚ್ಚರಿ ಎಂಬಂತೆ ಸಂಪುಟದಲ್ಲಿ ಹಿರಿಯ ಸಚಿವರಾಗಿದ್ದ ಚಂಪಯ್ ಸೊರೇನ್ ಅವರನ್ನು ಆಡಳಿತಾರೂಢ ಜೆಎಂಎಂ ಪಕ್ಷದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸಲಾಗಿದೆ.
ಚಂಪಯ್ ಸೊರೇನ್ ಅವರು ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಇಂದು(ಫೆ. 1) ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೂ ಮೊದಲು ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್ ಅವರು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರ ಬದಲಿಗೆ ಚಂಪಯ್ ಸೊರೇನ್ ಅವರನ್ನು ಆಯ್ಕೆ ಮಾಡಲಾಗಿದೆ.
ಭೂ ಹಗರಣ ಹಾಗೂ ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬಂಧಿಸಿದ್ದಾರೆ. ಆ ಹಿನ್ನೆಲೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಜ. 31ರ ಸಂಜೆ ರಾಜ್ಯಪಾಲರನ್ನು ಭೇಟಿಯಾದ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.
ಏನಿದು ಹಗರಣ?
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಸೇನೆಗೆ ಸೇರಿದ ನೂರಾರು ಕೋಟಿ ರು. ಬೆಲೆ ಬಾಳುವ ಸುಮಾರು 7 ಎಕರೆ ಭೂಮಿಯನ್ನು ಅಕ್ರಮ ದಾಖಲೆ ಸೃಷ್ಟಿಸುವ ಮೂಲಕ ಕಬಳಿಸಿದ ಆರೋಪ ಹೇಮಂತ್ ಸೊರೇನ್ ಮೇಲಿದೆ. ಈ ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳು ಸೇರಿದಂತೆ 14 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಈ ಭೂಮಿ ಗೋಲ್‌ಮಾಲ್ ಪ್ರಕರಣ ಸಂಬಂಧ ಅಕ್ರಮ ಹಣದ ವಹಿವಾಟು ತನಿಖೆಯನ್ನು ಇ.ಡಿ. ನಡೆಸುತ್ತಿದೆ.