- ಕಲಬುರಗಿಯ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಚಾಲನೆ
- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಚಿವರು ಭಾಗಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು.
ಕಲಬುರಗಿಯ ನಗರದ ನೂತನ ವಿದ್ಯಾಲಯ (ಎನ್) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಮತ್ತು ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಗೃಹ ಜ್ಯೋತಿ’ ಯೋಜನೆಗೆ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಚಾಲನೆ ಕೊಟ್ಟರು.
ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂಧನ ಸಚಿವ ಕೆಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿದಂತೆ ಇತರರು ಇದ್ದರು.