ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೋತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಢಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಶುಕ್ರವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಭರವಸೆ ನೀಡುವುದು ಸುಲಭ ಆದರೆ ಅವುಗಳನ್ನು ಸರಿಯಾಗಿ ಕಾರ್ಯಗತಗೊಳಿಸುವುದು ಕಠಿಣ ಅಥವಾ ಅಸಾಧ್ಯ ಎಂಬ ಕಠಿಣ ಮಾರ್ಗವನ್ನು ಕಾಂಗ್ರೆಸ್ ಪಕ್ಷ ಅರಿತುಕೊಂಡಿದೆ. ಅವರು ನೀಡಿದ ಭರವಸೆಯನ್ನು ಎಂದಿಗೂ ಪೂರೈಸಲು ಸಾಧ್ಯವಾಗುವುದಿಲ್ಲ ಎಂಬುದು ಅವರಿಗೆ ತಿಳಿದಿದೆ” ಎಂದು ಹೇಳಿದ್ದರು.
ಜೊತೆಗೆ, “ಇಂದು ಕಾಂಗ್ರೆಸ್ ಸರ್ಕಾರ ಹೊಂದಿರುವ ಯಾವುದೇ ರಾಜ್ಯವನ್ನು ಪರಿಶೀಲಿಸಿ- ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣವಾಗಲಿ ಕೆಟ್ಟದಾಗಿದ್ದ ಅಭಿವೃದ್ಧಿಯ ಪಥ ಮತ್ತು ಹಣಕಾಸಿನ ಸ್ಥಿತಿ ಹದಗೆಡುತ್ತಿದೆ” ಎಂದಿದ್ದರು. ಹಾಗೆಯೇ “ಕಾಂಗ್ರೆಸ್ ಪ್ರಾಯೋಜಿತ ನಕಲಿ ಗ್ಯಾರಂಟಿಯ ಸಂಸ್ಕೃತಿಯ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ” ಎಂದು ಪೋಸ್ಟ್ ಮಾಡಿದ್ದರು.
The Congress Party is realising the hard way that making unreal promises is easy but implementing them properly is tough or impossible. Campaign after campaign they promise things to the people, which they also know they will never be able to deliver. Now, they stand badly…
— Narendra Modi (@narendramodi) November 1, 2024
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು. ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಒಳಮೀಸಲಾತಿ | ಆಯೋಗ ರಚನೆ ಹಿಂದೆ ಕಾಲಹರಣ ತಂತ್ರವಿಲ್ಲ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
“ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಲಭಿಸಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.
“ಸನ್ಮಾನ್ಯ ಮೋದಿ ಅವರೇ, ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಕರ್ನಾಟಕದ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ – ನಮ್ಮ 5 ಗ್ಯಾರಂಟಿ ಯೋಜನೆಗಳನ್ನು ₹52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು ₹52,903 ಕೋಟಿ ಅನುದಾನ ಬಳಸಲಾಗುತ್ತಿದೆ” ಎಂದು ತಿಳಿಸಿದರು.
“ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ದಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು 40% ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಶಕ್ತಿ ಯೋಜನೆಯಲ್ಲಿ ಯಾವ ಬದಲಾವಣೆಯೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
“ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಭರವಸೆಗಳೇನಾಯಿತು? ಪ್ರತಿಯೊಬ್ಬನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಜಮೆ ಆಯಿತೇ? ಕಪ್ಪು ಹಣ ಮಾಯವಾಯಿತೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಯಿತೇ? ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ? ಎಲ್ಲಿದೆ ನಿಮ್ಮ ಮೇಕ್ ಇನ್ ಇಂಡಿಯಾ? ನಿಮ್ಮ ಸಾಧನೆಗಳಾದರೂ ಏನು? ನಾಡನ್ನು ಸಾಲದ ಕೂಪಕ್ಕೆ ತಳ್ಳಿದ್ದೆ? ಸುಳ್ಳು ಮತ್ತು ಅಪಪ್ರಚಾರದ ಮೂಲಕ ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಿದ್ದೇ” ಎಂದು ಪ್ರಶ್ನಿಸಿದ್ದಾರೆ.
“ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ₹185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು” ಎಂದು ವಿವರಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರೇ, ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ ‘ತೂ ತೂ ಮೇ ಮೇ’ ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ” ಎಂದು ಸವಾಲೆಸೆದಿದ್ದಾರೆ.
