ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅನಾಗರಿಕ ವಿಕೃತ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಮಗಳು ನೇಹಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಫೋಷಕರಿಗೆ ಸಾಂತ್ವನ ಹೇಳಿ ಕುಟುಂಬದ ಸದಸ್ಯರು ಮತ್ತು ಬಂಧುಗಳೊಂದಿಗೆ ಚರ್ಚಿಸಿದರು.
ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಆರೋಪಿಗೆ ಆತನ ಕೃತ್ಯಕ್ಕೆ ಸರಿ ಸಮನಾದ ಕಾನೂನಿನ ಶಿಕ್ಷೆ ಕೊಡಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ತನಿಖೆ ಅತ್ಯಂತ ತ್ವರಿತವಾಗಿ ನಡೆಯುತ್ತಿದೆ” ಎಂದು ತಿಳಿಸಿದರು.
“ಇಂಥಾ ದುಷ್ಕರ್ಮಿಗಳು ಯಾರೇ ಇದ್ದರೂ ಮತ್ತೆ ಇಂಥಾ ಹೀನ ಕೃತ್ಯಕ್ಕೆ ಕೈ ಹಾಕಬಾರದು ಎನ್ನುವ ಸ್ಪಷ್ಟ ಎಚ್ಚರಿಕೆ ನೀಡುವ ರೀತಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಇದೇ ವೇಳೆ ಮುಖ್ಯಮಂತ್ರಿ ತಿಳಿಸಿದರು.
