- ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು
- ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲು
ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಒಳಗೊಂಡಂತೆ ಹಲವರ ವಿರುದ್ದ ರಾಜ್ಯ ಕಾಂಗ್ರೆಸ್ ದೂರು ದಾಖಲಿಸಿದೆ.
ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಚಂಡೀಗಢ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಈ ದೂರು ನೀಡಿದ್ದು, ಅಗತ್ಯ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೂರು ನೀಡಿದ ಬಳಿಕ ಮಾತನಾಡಿದ ಪ್ರಿಯಾಂಕ್ ಖರ್ಗೆ ಬಿಜೆಪಿ ಐಟಿ ಸೆಲ್ ನ ಸುಳ್ಳಿನ ಫ್ಯಾಕ್ಟರಿಯನ್ನು ರಾಜ್ಯದಲ್ಲಿ ಬಂದ್ ಮಾಡಲು ತೀರ್ಮಾನಿಸಿದ್ದೇವೆ.
ಅವರು ಸದಾ ಕೋಮು ವಿಷಬೀಜ ಬಿತ್ತಿ, ಸುಳ್ಳನ್ನು ನೀಜ ಎಂದು ಬಿಂಬಿಸುವುದು, ಸಮಾಜದಲ್ಲಿ ಭೀತಿ ಸೃಷ್ಟಿಸುವುದು ಇವರ ಕೆಲಸವಾಗಿದೆ. ಕಳೆದ ಸರ್ಕಾರದಲ್ಲಿ ಇವರ ಆಟ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಮಾಡಿ ತೋರಿಸುತ್ತೇವೆ. ಸುಳ್ಳು ಮಾಹಿತಿ ನೀಡಿ, ಶಾಂತಿ, ಕಾನೂನು ಸುವ್ಯವಸ್ಥೆ ಕದಡಲು ಪ್ರಯತ್ನಿಸುವವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ.
ಇವರು ತಮ್ಮ ವಿಡಿಯೋದಲ್ಲಿ ಕಾಂಗ್ರೆಸ್ ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದೆ ನಿಂತು ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ನಡ್ಡಾ, ಮಾಳವಿಯಾ ಹಾಗೂ ಸೂದ್ ಅವರು ಅಧಿಕೃತವಾಗಿ ತಪ್ಪು ಮಾಹಿತಿ ನೀಡುವಾಗ ನಾವು ಸುಮ್ಮನೆ ಕೂರುವುದಿಲ್ಲ.
ಅವರು ನಮ್ಮ ವಿರುದ್ಧ ಮಾಡಿರುವ ಆರೋಪವನ್ನು ಸಮರ್ಥಿಸಿಕೊಳ್ಳಬೇಕು. ಬೇಕಾದರೆ ಅವರು ನಮ್ಮ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ. ಈದರೆ ಸುಳ್ಳು ಪ್ರಚಾರ ನಡೆಸುತ್ತಿರುವ ಅವರ ವಿರುದ್ಧ ಸೆಕ್ಷನ್ 505(2), 553 (ಎ), 120(ಬಿ), 34 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ದೂರು ನೀಡಿದ್ದೇವೆ.
ಈ ಸುದ್ದಿ ಓದಿದ್ದೀರಾ? :ಕೇಂದ್ರ ಸರ್ಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಬದ್ಧವಾಗಿ ನಡೆದುಕೊಳ್ಳಲಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ
ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಸಮಾನತೆ ತರಲು, ಸಂವಿಧಾನದ ಪರವಾಗಿ, ಬಡವರ ಏಳಿಗೆಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇದು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಇಂತಹ ಸುಳ್ಳು ಮಾಹಿತಿ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದು ಯಶಸ್ವಿಯಾಗಲು ನಾವು ಬಿಡುವುದಿಲ್ಲ. ಇವರನ್ನು ಕಾನೂನು ಮೂಲಕ ಎದುರಿಸುತ್ತೇವೆ.
ಅಮಿತ್ ಮಾಳವಿಯ ಅವರು ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ಪಕ್ಷ ಹೇಗೆ ದೇಶ ವಿರೋಧಿ ಚಟುವಟಿಕೆ ಮಾಡುತ್ತಿದೆ ಎಂದು ಹೇಳಲಿ. ಇಲ್ಲದಿದ್ದರೆ, ಕ್ಷಮೆ ಕೇಳಿ, ಮುಂದೆ ಇಂತಹ ಸುಳ್ಳು ಪ್ರಚಾರ ಮಾಡುವುದಿಲ್ಲ ಎಂದು ಪತ್ರ ಬರೆದುಕೊಡಬೇಕು. ಸುಳ್ಳು ಸುದ್ದಿ, ಕೋಮು ಸೌಹಾರ್ದತೆಗೆ ಧಕ್ಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧ ಎಂದರು.
ಹೀಗೆ ಜಾಡಿಸಿದರನೇ ಅವಕ್ಕೆ ಬುದ್ಧಿ ಬರೋದು..