ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ ಕಾಂಗ್ರೆಸ್, ಈಗ ವಿಧಾನಸಭಾ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಜಾರ್ಖಂಡ್, ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತನ್ನ ಹೋರಾಟವನ್ನು ತೀವ್ರಗೊಳಿಸಲು ಪಕ್ಷವು ಸಭೆ ಸೇರುತ್ತಿದೆ. ಮುಂದಿನ ವಾರದಿಂದ ಪಕ್ಷ ಸಂಘಟನೆಯನ್ನು ಬಲಪಡಿಸಲು ಮತ್ತು ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸಲು ಸರಣಿ ಸಭೆಗಳನ್ನು ನಿಗದಿ ಮಾಡಿದೆ.
ಸಭೆಗಳ ಕುರಿತ ಯೋಜನೆಗಳನ್ನು ಪ್ರಕಟಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, “ಕಾಂಗ್ರೆಸ್ ಹೈಕಮಾಂಡ್ ಜೂನ್ 24ರಂದು ಜಾರ್ಖಂಡ್, 25ರಂದು ಮಹಾರಾಷ್ಟ್ರ, 26ರಂದು ಹರಿಯಾಣ ಹಾಗೂ 27ರಂದು ಜಮ್ಮು-ಕಾಶ್ಮೀರದಲ್ಲಿ ಸ್ಥಳೀಯ ನಾಯಕರೊಂದಿಗೆ ಸಭೆ ನಡೆಸಲಿದೆ” ಎಂದು ಹೇಳಿದ್ದಾರೆ.
“ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಏಳುತ್ತಿದೆ. ಅದನ್ನು ಮುಂದುವರೆಸುತ್ತಾ, ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ನಾವು ಸಿದ್ದರಾಗಿದ್ದೇವೆ. ನಮ್ಮ ಯೋಜನೆಗಳಿಗೆ ಕಿಕ್‌ಸ್ಟಾರ್ಟ್ ಕೊಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳ ಹಿರಿಯ ನಾಯಕರೊಂದಿಗೆ ಕಾರ್ಯತಂತ್ರದ ಸಭೆಗಳನ್ನು ನಡೆಸಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
ಜಾರ್ಖಂಡ್‌ನಲ್ಲಿ, ಕಾಂಗ್ರೆಸ್ ತನ್ನ ಸಾಂಸ್ಥಿಕ ನೆಲೆಯನ್ನು ಮತ್ತಷ್ಟು ವಿಸ್ತರಿಸಲು ಎದುರು ನೋಡುತ್ತಿದೆ. ಆ ರಾಜ್ಯದಲ್ಲಿ 7 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿ, ಕೇವಲ 2 ಸ್ಥಾನಗಳಲ್ಲಿ ಮಾತ್ರವೇ ಗೆದ್ದಿದೆ.
ಮಹಾರಾಷ್ಟ್ರ ಮತ್ತು ಹರಿಯಾಣ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಪ್ರದರ್ಶನ ನೀಡಿರುವ ಕಾಂಗ್ರೆಸ್, ಎರಡೂ ರಾಜ್ಯಗಳಲ್ಲಿ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. “ಶಿವಸೇನೆ (ಯುಬಿಟಿ), ಕಾಂಗ್ರೆಸ್ ಮತ್ತು ಎನ್‌ಸಿಪಿ (ಎಸ್‌ಪಿ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ” ಎಂದು ಪಹಾರಾಷ್ಟ್ರದ ಕಾಂಗ್ರೆಸ್ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ.
ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ ಎಂವಿಎ 30 ಸ್ಥಾನಗಳನ್ನು ಗೆದ್ದುಕೊಂಡಿದೆ. ಅದರಲ್ಲಿ, ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ. “ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಯನ್ನು ಮಣಿಸಲು ಎಂವಿಎ ಒಗ್ಗಟ್ಟಿನಿಂದ ಕೆಲಸ ಮಾಡಲಿದೆ” ಎಂದು ಚೆನ್ನಿತ್ತಲ ಹೇಳಿದ್ದಾರೆ.
ಹರಿಯಾಣದ 10 ಲೋಕಸಭಾ ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, ರಾಜ್ಯ ಚುನಾವಣೆಯಲ್ಲಿ ಗಮನಾರ್ಹ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಹೊಂದಿದೆ.