ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಶಾಸಕರು ಮತ್ತು ಸಚಿವರ ನಡುವೆ ಮುಸುಕಿನ ಗುದ್ದಾಟ ಪ್ರಾರಂಭವಾಗಿದ್ದು, ಸಚಿವರ ವಿರುದ್ಧ ಆರೋಪ ಮಾಡಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಶಾಸಕಾಂಗ ಸಭೆ ಕರೆದ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಈ ಪತ್ರದಲ್ಲಿ 11 ಮಂದಿ ಕಾಂಗ್ರೆಸ್ ಶಾಸಕರ ಸಹಿ ಕೂಡ ಇದೆ.
ಇದೇ ವಿಷಯವಾಗಿ ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿ, “ನಮ್ಮ ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷ ಸಭೆ ನಡೆಸಿ ಎಂದು ಶಾಸಕರು ಪತ್ರ ಬರೆದಿದ್ದಾರೆ. ಅವರ ಪತ್ರದಲ್ಲಿ ಯಾವುದೇ ಸಚಿವರ ಮೇಲೆ ದೂರು ಇಲ್ಲ” ಎಂದು ಸ್ಪಷ್ಟನೆ ನೀಡಿದ್ದರು. ಆದರೆ, ಈಗ ಶಾಸಕರು ಸಿಎಂಗೆ ಬರೆದಿರುವ ಪತ್ರ ಬಹಿರಂಗವಾಗಿದೆ.

ಶಾಸಕ ಬಿ ಆರ್ ಪಾಟೀಲ್ ಅವರು ಸಿಎಂಗೆ ಬರೆದಿರುವ ಪತ್ರದಲ್ಲಿ “ಜಿಲ್ಲಾ ಉಸ್ತವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆಯ ಬಗ್ಗೆ” ಎಂದು ವಿಷಯ ಪ್ರಸ್ತಾಪಿಸಿದ್ದು, “ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಕಾರಣ ನಾನಾ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ, ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರದ ವಿಷಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾವುದೇ ಸಚಿವರ ಮೇಲೆ ಶಾಸಕರಿಂದ ದೂರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
“ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ. ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.