- ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್
- ವಿಡಿಯೋದಲ್ಲಿ ಗಾದೆ ಮಾತು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಹಿನ್ನೆಲೆ
‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಹೇಳಿಕೆ ನೀಡಿದ್ದ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಈ ದಿನ.ಕಾಮ್ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರಿಸಿದಾಗ, “ಉಪೇಂದ್ರ ಅವರು ತಮ್ಮ ಹೇಳಿಕೆಯ ಮೂಲಕ ದಲಿತರ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ಬಂದಿತ್ತು. ಈ ಸಂಬಂಧ ಅಟ್ರಾಸಿಟಿ ಪ್ರಕರಣದನ್ವಯ ಎಫ್ಐಆರ್ ದಾಖಲಾಗಿದೆ” ಎಂದು ಖಚಿತಪಡಿಸಿದ್ದಾರೆ.

ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಿದ್ದ ವೇಳೆ ಉಪೇಂದ್ರ ಅವರು, ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಗಾದೆ ಮಾತನ್ನು ಬಳಸಿದ್ದರು. ಆ ಮೂಲಕ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚನೆ ಮಾಡಿದ್ದ ನಟ ಉಪೇಂದ್ರ, ‘ಬಾಯಿ ತಪ್ಪಿನಿಂದ ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗೆ ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲೀಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ’ ಎಂದು ಹೇಳಿದ್ದರು.
ಇದನ್ನು ಓದಿದ್ದೀರಾ? ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಹೇಳಿಕೆಗೆ ವ್ಯಾಪಕ ಆಕ್ರೋಶ: ಕ್ಷಮೆ ಕೇಳಿದ ನಟ ಉಪೇಂದ್ರ
ಈ ಎಲ್ಲ ಬೆಳವಣಿಗೆಗಳ ನಡುವೆ ಎಫ್ಐಆರ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಮಧುಸೂಧನ್ ಎಂಬವರು ಈ ಸಂಬಂಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು, ಮುಂದಿನ ತನಿಖೆ ಕೈಗೊಂಡಿದ್ದಾರೆ.