ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಸಂಸದ-ಶಾಸಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ.
2018ರಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ನಾಯಕ ವಿಜಯ್ ಮಿಶ್ರಾ ಆರೋಪಿಸಿದ್ದರು. 2018ರ ಆಗಸ್ಟ್ 4ರಂದು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಶುಕ್ರವಾರ ನಡೆಸಿದೆ. ರಾಹುಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಆಗಸ್ಟ್ 12ರಂದು ಅರ್ಜಿದಾರರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ. ಅದು ರಾಹುಲ್ ನ್ಯಾಯಾಲಯಕ್ಕೆ ಹಾಜರಾಗುವ ಅಗತ್ಯವಿಲ್ಲ ಎಂದು ಕೋರ್ಟ್ ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭಿಷೇಕ್ ಸಿಂಗ್ ರಾಣಾ ಖಚಿತಪಡಿಸಿದ್ದಾರೆ.