ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಗ್ರಾಮದ ಪ್ರಮುಖ ವೃತ್ತದಲ್ಲಿ 18 ವರ್ಷಗಳ ಹಿಂದೆ ನಿರ್ಮಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದು, ಕಿಡಿಗೇಡಿಗಳ ಈ ಕೃತ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್) ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ” ಎಂದಿದ್ದಾರೆ.
“ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.