- ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಅಭಿಮತ
- ‘ದುಷ್ಟಶಕ್ತಿಗಳು ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿವೆ’
ಇಂದು ನಾವು ಬರೀ ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದರೆ ಸಾಲದು. ನಮ್ಮ ದೇಶದ ಸ್ವಾತಂತ್ರ್ಯ ಏನಾಗಿದೆ ಎಂದು ಅರಿಯಬೇಕಿದೆ. ಮಣಿಪುರದಲ್ಲಿ ಮಾರಣಹೋಮ, ಹರಿಯಾಣದ ಗಲಭೆ, ಉತ್ತರ ಪ್ರದೇಶದ ದೊಂಬಿ ಹತ್ಯೆ ನೋಡಿದರೆ ನಮ್ಮ ದೇಶದ ಸ್ವಾತಂತ್ರ್ಯ ಏನಾಗಿದೆ? ಅದು ಯಾರ ಕೈಯಲ್ಲಿ ನಲುಗುತ್ತಿದೆ ಎಂಬುದು ತಿಳಿಯುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಶುಭಾಶಯ ತಿಳಿಸಿ ಮಾತನಾಡಿದ ಅವರು, “ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಬದುಕಿನ ಉಸಿರು. ಹೀಗಾಗಿ ಸ್ವಾತಂತ್ರ್ಯಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ” ಎಂದರು.
“ಸ್ವಾತಂತ್ರ್ಯದ ಮೂಲ ಗುರಿಯಾದ ಐಕ್ಯತೆ, ಸಮಗ್ರತೆ, ಸಹಬಾಳ್ವೆ, ಕೋಮು ಸೌಹಾರ್ದತೆ ಇಂದು ದಿಕ್ಕಾಪಾಲಾಗಿದೆ. ಅವರಿಗೆ ಸ್ವಾತಂತ್ರ್ಯದ ಮಹತ್ವ ಗೊತ್ತಿಲ್ಲ. ಏಕೆಂದರೆ ಅದಕ್ಕಾಗಿ ಹೋರಾಡಿದ ಇತಿಹಾಸ ಆ ಪಕ್ಷಕ್ಕಿಲ್ಲ. ಹೀಗಾಗಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ನಮ್ಮ ಯುವ ಪೀಳಿಗೆಗೆ ಅರಿವು ಮೂಡಿಸಬೇಕು. ಈ ವಿಚಾರದಲ್ಲಿ ನಾವು ಎಡವಿದ ಪರಿಣಾಮ, ಬ್ರಿಟಿಷ್‌ರಿಗೆ ಕ್ಷಮಾಪಣೆ ಪತ್ರ ಬರೆದು ಗುಲಾಮರಾದವರನ್ನು ದೇಶಭಕ್ತ ಎಂದು ಪೂಜಿಸಲಾಗುತ್ತಿದೆ” ಎಂದು ಹರಿಹಾಯ್ದರು.
“ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ಮುಡಿಪಿಟ್ಟ ಗಾಂಧೀಜಿಯನ್ನೇ ಪ್ರಶ್ನೆ ಮಾಡಲಾಗುತ್ತಿದೆ. ಕೋಮುವಾದಿ ಹಾಗೂ ಸರ್ವಾಧಿಕಾರಿ ಮನಸ್ಥಿತಿ ದೇಶದ ಅಧಿಕಾರದ ಗದ್ದುಗೆಯಲ್ಲಿದೆ. ಈ ದುಷ್ಟಶಕ್ತಿಗಳು ಕೇವಲ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿಲ್ಲ. ಅವರು ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದ್ದಾರೆ” ಎಂದು ಟೀಕಿಸಿದರು.
“ಅಹಿಂಸೆ, ಶಾಂತಿ, ಸೌಹಾರ್ದತೆ, ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿರುವ ಈ ದೇಶದಲ್ಲಿ ಧರ್ಮ, ಜಾತಿ, ವರ್ಣದ ವಿಷ ಬೀಜ ಬಿತ್ತಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮ ಬ್ರಿಟೀಷರ ವಿರುದ್ಧ ನಡೆದಿತ್ತು, ಇಂದಿನ ಸಂಗ್ರಾಮ ಕೋಮುವಾದಿ ಶಕ್ತಿಗಳ ವಿರುದ್ಧ ನಡೆಯಬೇಕು” ಎಂದು ಕರೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ
“ಸ್ವಾತಂತ್ರ್ಯದ ಬೆಲೆ ಗೊತ್ತಾಗುವುದು ಅದಕ್ಕಾಗಿ ಹೋರಾಡಿದವರಿಗೆ, ರಕ್ತ ಸುರಿಸಿದವರಿಗೆ ಹಾಗೂ ಪ್ರಾಣ ತೆತ್ತವರಿಗೆ ಮಾತ್ರ ತಿಳಿಯುತ್ತದೆ. ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್ ಪಕ್ಷ ಎಂಬುದೇ ನಮ್ಮ ನಿಮ್ಮೆಲ್ಲರ ಹೆಮ್ಮೆ. ಮಹಾತ್ಮಾ ಗಾಂಧಿ, ಜವಹರಲಾಲ್ ನೆಹರೂ, ಮೌಲಾನ ಅಜಾದ್, ಭಗತ್ ಸಿಂಗ್, ವಲ್ಲಭಬಾಯ್ ಪಟೇಲ್, ಡಾ ಬಿ ಆರ್ ಅಂಬೇಡ್ಕರ್, ಸರೋಜಿನಿ ನಾಯ್ಡು ಅವರ ಹೋರಾಟದ ಫಲವಾಗಿ ನಾವು ಸ್ವತಂತ್ರ ಭಾರತದ ಫಲಾನುಭವಿಗಳಾಗಿದ್ದೇವೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದದ್ದು, ದೇಶ ಕಟ್ಟಿದ್ದು, ಅಭಿವೃದ್ಧಿಯ ಪಥದಲ್ಲಿ ದೇಶವನ್ನು ನಿಲ್ಲಿಸಿದ್ದು ಕಾಂಗ್ರೆಸ್ ಪಕ್ಷ ಎಂಬುದು ಹೆಮ್ಮೆಯ ಸಂಗತಿ” ಎಂದು ಬಣ್ಣಿಸಿದರು.
“ಸ್ವಾತಂತ್ರ್ಯ ಎಂಬುದು ಅದು ಕೇವಲ ರಾಜಕೀಯ ನಿರ್ಧಾರವೂ ಅಲ್ಲ ಅಥವಾ ಹೊಸ ಸಂವಿಧಾನವಲ್ಲ. ಇದು ಮನಸ್ಸು ಹಾಗೂ ಹೃದಯಕ್ಕೆ ಸಂಬಂಧಿಸಿದ್ದು. ಒಂದು ವೇಳೆ ಮನಸ್ಸು ಸಂಕುಚಿತವಾಗಿದ್ದರೆ ಅಥವಾ ಗೊಂದಲದಲ್ಲಿದ್ದರೆ, ಹೃದಯ ಅಸೂಯೆ ಅಥವಾ ದ್ವೇಷದಿಂದ ತುಂಬಿದ್ದರೆ ಅಲ್ಲಿ ಸ್ವಾತಂತ್ರ್ಯ ಎಂಬುದು ಅಸ್ತಿತ್ವದಲ್ಲಿರುವುದಿಲ್ಲ” ಎಂದು ನೆಹರೂ ಮಾತನ್ನು ಉಲ್ಲೇಖಿಸಿ ಮಾತನಾಡಿದರು.
“ಅಂದು ಕಾಂಗ್ರೆಸ್ ನೇತೃತ್ವದಲ್ಲಿ ದೇಶವೇ ಒಂದಾಗಿತ್ತು. ಇಂದು ಕಾಂಗ್ರೆಸ್ ನೇತೃತ್ವದಲ್ಲಿ ‘ಇಂಡಿಯಾ’ ಒಂದಾಗಿದೆ. ಬ್ರಿಟಿಷ್ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ. 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ” ಎಂದರು.