ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ‘ವಕ್ಫ್ (ತಿದ್ದುಪಡಿ) ಮಸೂದೆ-2024’ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಹೇಳಿದೆ.
ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿಯನ್ನು ಕಸಿದುಕೊಳ್ಳುವ, ನಿಯಂತ್ರಣ ಸಾಧಿಸಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ ‘ವಕ್ಫ್ ಮಸೂದೆ’ಯನ್ನು ಡಿಎಂಕೆ ಹಿಂದಿನಿಂದಲೂ ವಿರೋಧಿಸುತ್ತಿದೆ. ಕಳೆದ ತಿಂಗಳು (ಮಾರ್ಚ್ 27) ತಮಿಳುನಾಡು ವಿಧಾನಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು.
ಲೋಕಸಭೆಯಲ್ಲಿ ಮಸೂದೆ ಅಂಗೀಕಾರ ಆಗಿದ್ದರ ವಿರುದ್ಧ ಕಪ್ಪು ಪಟ್ಟಿ ಧರಿಸಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರತಿಭಟಿಸಿದ್ದಾರೆ. ವಕ್ಫ್ ಮಸೂದೆ ವಿಚಾರದಲ್ಲಿ ತಮಿಳುನಾಡು ಸರ್ಕಾರವು ಕಾನೂನು ಹೋರಾಟ ನಡೆಸಲಿದೆ ಮತ್ತು ಗೆಲುವು ಸಾಧಿಸಲಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
“ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಹಾಳುಗೆಡುವುತ್ತದೆ. ಮಾತ್ರವಲ್ಲದೆ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ದೇಶದ ಬಹುತೇಕ ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳ ಸಂಖ್ಯೆಯನ್ನು ನಿರ್ಲಕ್ಷಿಸಬಾರದು” ಎಂದು ಸ್ಟಾಲಿನ್ ಹೇಳಿದ್ದಾರೆ.
ಬುಧವಾರ, ಲೋಕಸಭೆಯಲ್ಲಿ ಕೇಂದ್ರ ಸಂಸದೀಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದರು. ಸುದೀರ್ಘ ಚರ್ಚೆಯ ಬಳಿಕ ಲೋಕಸಭೆಯಲ್ಲಿ ಮಸೂದೆಯ ಪರವಾಗಿ 288 ಮತಗಳು ಮತ್ತು ಮಸೂದೆಯ ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಅಗತ್ಯ ಬಹುಮತವು ಮಸೂದೆ ಪರವಾಗಿ ಬಂದಿದ್ದರಿಂದ, ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಂಡಿತು.