- ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ನಂತರ ಸಿಎಂ ಹೇಳಿಕೆ
- 113 ತಾಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ
ಬರಗಾಲ ಪರಿಸ್ಥಿತಿಯ ಬಗ್ಗೆ ಜಂಟಿ ಸಮೀಕ್ಷೆ ನಡೆಸಲಾಗಿದ್ದು, ವರದಿ ಬಂದ ನಂತರ ಸೆ.4 ರಂದು ‘ಬರಗಾಲ ಘೋಷಣೆ’ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೃಷ್ಣಾ ಭಾಗ್ಯ ಜಲನಿಗಮದಿಂದ ಆಲಮಟ್ಟಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೃಷ್ಣೆಗೆ ಬಾಗಿನ ಅರ್ಪಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಒಟ್ಟಾರೆಯಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾದ ಪರಿಣಾಮ, ಶೇ. 56% ಕೊರತೆಯಾಗಿದೆ. ಆಗಸ್ಟ್‌ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಮೂರು ಸಭೆಗಳನ್ನು ನಡೆಸಿದೆ. ಸೆ.4ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.
ಬರ ಘೋಷಣೆಯ ನಂತರ ಬರಪೀಡಿತ ತಾಲೂಕುಗಳಿಗೆ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ, ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ . ಅದಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
2020ರಿಂದ ಇಲ್ಲಿಯವರೆಗೆ ಪರಿಷ್ಕರಣೆ ಆಗಿಲ್ಲ. ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಹಾಗೂ ರಾಜ್ಯಗಳಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೃಷ್ಣಾ ಕಾವೇರಿ ಜೀವನದಿಗಳು. ಕಾವೇರಿ, ಕೃಷ್ಣಾ ನದಿ ಪಾತ್ರದಲ್ಲಿರುವವರೆಲ್ಲರೂ ನಮ್ಮ ರೈತರೇ. ತಾರತಮ್ಮ ಮಾಡುವ ಪ್ರಶ್ನೆಯೇ ಇಲ್ಲ. ಅಖಂಡ ಕರ್ನಾಟಕದಲ್ಲಿ ದಕ್ಷಿಣ, ಉತ್ತರ ಎಂಬ ಪ್ರಶ್ನೇ ಇಲ್ಲ ಎಂದರು.
ಕಾವೇರಿ ವಿವಾದ: ದೆಹಲಿಗೆ ಶೀಘ್ರವೇ ಸರ್ವ ಪಕ್ಷ ನಿಯೋಗ
ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರ ಸಮಯವನ್ನು ಕೋರಿದ್ದೇವೆ. ಈಗಾಗಲೇ ನಮ್ಮ ಜಲಸಂಪನ್ಮೂಲ ಸಚಿವರು ನಮ್ಮ ರಾಜ್ಯದ ಪರವಾಗಿ ವಾದ ಮಂಡಿಸುವ ವಕೀಲರನ್ನು ಭೇಟಿ ಮಾಡಿದ್ದು, ಅವರಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಬುಧವಾರ ಪ್ರಕರಣ ವಿಚಾರಣೆಗೆ ಬರಲಿದ್ದು ನಮ್ಮ ವಾದ ಏನಿರಬೇಕು ಎಂದು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದರು.
ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿದ್ದಲ್ಲಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು. ಮಹದಾಯಿ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿದ್ದರೂ, ಅರಣ್ಯ ಹಾಗೂ ಪರಿಸರ ತೀರುವಳಿ ದೊರೆತಿರುವುದಿಲ್ಲ. ಈ ಯೋಜನೆಗೆ ತೀರುವಳಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ 3 ನೇ ಹಂತ ಪೂರ್ಣಗೊಳ್ಳಲು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು 1 ಲಕ್ಷ ಕೋಟಿ ರೂ.ಗಳ ಅಗತ್ಯವಿದೆ. 2023 ರ ಅಂದಾಜಿನ ಪ್ರಕಾರ 83700 ಕೋಟಿ ರೂ. ಇದ್ದು, ಯೋಜನೆ ಪೂರ್ಣಗೊಳ್ಳುವವರೆಗೆ 1 ಲಕ್ಷ ಕೋಟಿ ವೆಚ್ಚವಾಗುವ ಸಾಧ್ಯತೆ ಇದೆ. ಯೋಜನೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯಗಳು, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚಿನ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್, ಸಚಿವರಾದ ಕೃಷ್ಣಭೈರೇಗೌಡ, ಶಾಸಕರಾದ ಎಚ್.ವೈ. ಮೇಟಿ, ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಸಂಸದ ರಮೇಶ್ ಜಿಗಜಿಣಗಿ, ಪಿ.ಸಿ ಗದ್ದಿಗೌಡರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.