ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ವೇಳೆ ಸಿದ್ದರಾಮಯ್ಯ ಮಾತನಾಡಿದ ಕೆಲವು ಸಂಗತಿಗಳು ಗಮನ ಸೆಳೆದವು.
ನುಡಿದಂತೆ ನಡೆದಿದ್ದೇವೆ
ಯಾವುದೇ ಜಾತಿ-ಧರ್ಮ-ಲಿಂಗ-ಭಾಷೆಯ ಬೇಲಿ ಇಲ್ಲದೆ ಸಮಸ್ತ ಕನ್ನಡಿಗರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಲಾಗಿದೆ. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ.
ದುಂದುವೆಚ್ಚ-ದುರುಪಯೋಗಕ್ಕೆ ಬ್ರೇಕ್
ಬಡವರ ಮತ್ತು ಮಧ್ಯಮ ವರ್ಗದವರ ಅನುಕೂಲ ಮತ್ತು ಅಗತ್ಯಕ್ಕಾಗಿ ಜಾರಿ ಮಾಡಿರುವ ಮಹತ್ವದ ಐದು ಗ್ಯಾರಂಟಿ ಯೋಜನೆಗಳು ದುರುಪಯೋಗ ಮತ್ತು ದುಂದುವೆಚ್ಚ ಆಗದಂತೆ ಎಚ್ಚರಿಕೆ ವಹಿಸಲಾಗಿದೆ.
ನನ್ನ ಹೆಂಡ್ತಿಗೂ ಫ್ರೀ
ಬಸ್ ಪ್ರಯಾಣ “ನನ್ನ ಹೆಂಡ್ತಿಗೂ ಫ್ರೀ”. ಹೀಗೆ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸ್ಯ ಚಟಾಕಿ ಹಾರಿಸಿದರು.
ಕಿಕ್ಕಿರಿದು ತುಂಬಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರು ರಾಶಿ ರಾಶಿ ಪ್ರಶ್ನೆಗಳನ್ನು ಮುಂದಿಟ್ಟರು. ಎಲ್ಲಾ ಪ್ರಶ್ನೆಗಳಿಗೂ ಲೀಲಾಜಾಲವಾಗಿ, ಹಾಸ್ಯದ ಶೈಲಿಯಲ್ಲಿ ಮುಖ್ಯಮಂತ್ರಿಗಳು ಉತ್ತರಿಸಿದರು. ಪತ್ರಕರ್ತರಿಗೆ ಅರ್ಥ ಆಗುವಂತೆ ತಮ್ಮ ಮಾತುಗಳನ್ನು ಪುನರಾವರ್ತನೆ ಮಾಡಿದರು.
ರಾಜಹಂಸ ಬಸ್ಸಿಗೂ ಫ್ರೀ ಕೊಟ್ಟುಬಿಡ್ರಿ
ಉಚಿತ ಬಸ್ ಪ್ರಯಾಣದ ವಿವರ ನೀಡುತ್ತಿದ್ದ ಮುಖ್ಯಮಂತ್ರಿಗಳು ಬಾಯಿತಪ್ಪಿ “ರಾಜಹಂಸ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದು” ಅಂದುಬಿಟ್ಟರು. ಗಾಬರಿ ಬಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು “ರಾಜಹಂಸ ಉಚಿತ ಅಲ್ಲ” ಎಂದು ನೆನಪಿಸಿದರು. ಈ ವೇಳೆ ಮುಖ್ಯಮಂತ್ರಿಗಳು, “ರಾಜಹಂಸದಲ್ಲೂ ಉಚಿತವಾಗಿ ಓಡಾಡಲಿ ಬಿಡ್ರಿ” ಎಂದರು. ಇದಕ್ಕೆ ಉತ್ತರಿಸಿದ ಸಚಿವರು, “ಎಲ್ಲರೂ ರಾಜಹಂಸಕ್ಕೆ ನುಗ್ತಾರೆ. ಉಳಿದ ಬಸ್‌ಗಳನ್ನು ಹತ್ತುವುದಿಲ್ಲ” ಎಂದರು.
ಶೇ.94 ರಷ್ಟು ಉಚಿತ
ಐಷಾರಾಮಿ ಮತ್ತು ಎಸಿ ಹಾಗೂ ಸ್ಲೀಪರ್ ಕೋಚ್ ಬಸ್‌ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಬಸ್‌ಗಳಲ್ಲೂ ಮಹಿಳೆಯರು ಉಚಿತವಾಗಿ ಓಡಾಡಲು ಅವಕಾಶ ಕೊಟ್ಟಿರುವುದರಿಂದ ಶೇ 94 ರಷ್ಟು ಬಸ್‌ಗಳಲ್ಲಿ ಉಚಿತ ಅನುಕೂಲ ಒದಗಿಸಿದಂತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ತೃತೀಯ ಲಿಂಗಿಗಳಿಗೂ ಉಚಿತ
ಉಚಿತ ಬಸ್ ಪ್ರಯಣದ ಸವಲತ್ತು ಮತ್ತು ಯುವನಿಧಿ ಯೋಜನೆಯನ್ನು ತೃತೀಯ ಲಿಂಗಿಗಳಿಗೂ ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.