ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಿಸಲಾಗಿದ್ದ ಎಫ್‌ಐಆರ್‌ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಜಾರಿ ನಿರ್ದೇಶನಾಲಯದಿಂದ (ಇ.ಡಿ) ದಾಳಿ ಮಾಡಿಸುವುದಾಗಿ ಬೆದರಿಕೆಯೊಡ್ಡಿ ಪ್ರತಿಷ್ಠಿತ ಕಂಪೆನಿಗಳಿಂದ ಸುಮಾರು 8,000 ಕೋಟಿ ರೂ.ಗಳನ್ನು ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಸೂಚನೆಯಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾರ್ಪೊರೇಟ್ ಕಂಪೆನಿಗಳ ಮೇಲೆ ದಾಳಿ ನಡೆಸಿದ್ದರು. ಅಲ್ಲದೆ, ಹಲವರನ್ನು ಬಂಧಿಸಿದ್ದರು. ಇಂತಹ ದಾಳಿಗಳಿಗೆ ಹೆದರಿ ಕೆಲ ಕಂಪೆನಿಗಳ ಸಿಇಒಗಳು, ವ್ಯವಸ್ಥಾಪಕ ನಿರ್ದೇಶಕರುಗಳು ನೂರಾರು ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆದರ್ಶ್ ಅಯ್ಯರ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಕೋರ್ಟ್ ಸೂಚನೆ ಮೇರೆಗೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್‌ಅನ್ನು ರದ್ದುಪಡಿಸುವಂತೆ ಕೋರಿ ನಿರ್ಮಲಾ ಸೀತಾರಾಮನ್ ಮತ್ತು ಕಟೀಲ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ನಾಗಮಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಎಫ್‌ಐಆರ್‌ಅನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.