ಕರ್ನಾಟಕದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು (ಶನಿವಾರ) ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ಎಂಟು ಸುತ್ತಿನ ಮತ ಎಣಿಕೆಯೂ ಮುಗಿದಿದೆ. ಈವರೆಗಿನ ಮತ ಎಣಿಕೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದೆ.
ಉಪಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಪ್ರತಿನಿಧಿಸಿದ್ದ ಕ್ಷೇತ್ರಗಳು. ಆ ಎರಡೂ ಕ್ಷೇತ್ರಗಳಲ್ಲಿಯೂ ತಮ್ಮ ಮಕ್ಕಳನ್ನು ಕಣಕ್ಕಿಳಿಸಿದ್ದಾರೆ. ಈ ಇಬ್ಬರಿಗೂ ಕ್ಷೇತ್ರವನ್ನು ಗೆದ್ದು ಉಳಿಸಿಕೊಳ್ಳುವುದು ಪ್ರತಿಷ್ಠೆಯಾಗಿದೆ. ಆದರೆ, ಸದ್ಯದ ಮತ ಎಣಿಕೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಇಬ್ಬರ ಮಕ್ಕಳೂ ಹಿನ್ನಡೆ ಅನುಭವಿಸಿದ್ದಾರೆ. ಇನ್ನು, ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 18,440 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯಾಸಿನ್ ಮಹಮ್ಮದ್ ಪಠಾಣ್ ನಡುವೆ ಭಾರೀ ಪೈಪೋಟಿ ಇದ್ದು, ಪಠಾಣ್ ಅವರು ಮುನ್ನಡೆಯಲ್ಲಿದ್ದಾರೆ.
ಇನ್ನು, ಸಂಡೂರಿನಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ಹಿಂದಿಕ್ಕಿದ್ದಾರೆ. ಅನ್ನಪೂರ್ಣ ಅವರು 5,600 ಮತಗಳ ಮುನ್ನಡೆ ಸಾಧಿಸಿದ್ದಾರೆ.