ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವವರ ಅಸಮಾಧಾನ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕೆ ಎಸ್ ಈಶ್ವರಪ್ಪ ಅವರ ನಡೆ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.
ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದೆ. ವೃತ್ತಿಯಲ್ಲಿ ವೈದ್ಯರಾಗಿರುವ ಬಸವರಾಜ ಕ್ಯಾವಟರ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿರುವುದು ಕರಡಿ ಅಸಮಾಧಾನ ಹೆಚ್ಚಿಸಿದೆ.
ಕರಡಿ ಅಭಿಮಾನಿಗಳು ಜಿಲ್ಲಾ ಬಿಜೆಪಿ ಕಚೇರಿಗೆ ನುಗ್ಗಿ ಗಾಜುಗಳನ್ನು ಪುಡಿ ಪುಡಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೆ ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಛೆಯನ್ನು ತಮ್ಮ ಆಪ್ತರ ಬಳಿ ಸಂಗಣ್ಣ ಕರಡಿ ಹೇಳಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ
ಗುರುವಾರ (ಮಾ. 21) ಕೊಪ್ಪಳದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಭೆಯನ್ನು ಕರಡಿ ಕರೆದಿದ್ದಾರೆ. ಈ ಸಭೆಯ ಬಳಿಕ ಅವರು ತಮ್ಮ ಸ್ಪರ್ಧೆ ವಿಚಾರ ಬಹಿರಂಗ ಪಡಿಸಲಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ ಕ್ಷೇತ್ರದಂತೆ ಕೊಪ್ಪಳ ಕ್ಷೇತ್ರದಲ್ಲಿ ಕೂಡ ಬಿಜೆಪಿ ಒಡೆದ ಮನೆಯಂತಾಗಿದೆ. ಹೀಗಾಗಿ ಅವರ ಬೆಂಬಲಿಗರು ನಾಳೆಯ ಸಭೆಯನ್ನು ‘ಸ್ವಾಭಿಮಾನಿ ಬೆಂಬಲಿಗರ ಸಭೆ’ ಎಂದು ಕರೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಸಾಮಾಜಿಕ ತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಬಂಡಾಯ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಹೆಚ್ಚಿಸಿದೆ.
