- ಕಾಗೆ ಚರ್ಚೆಗಳಿಂದ ಜನರಿಗೆ ಏನು ಪ್ರಯೋಜನ: ಸಿಎಂ ಪ್ರಶ್ನೆ
- ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುವುದು ಬಿಡಿ
ಕಾಗೆ ಚರ್ಚೆಗಳಿಂದ, ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ನನ್ನ ಸರ್ಕಾರದ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಡ್ಯದ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡುತ್ತಿದೆಯೋ ಇಲ್ಲವೋ ಎನ್ನುವುದನ್ನೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡುತ್ತಾರೆ. ಇದು ತಪ್ಪು” ಎಂದರು.
“ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್ ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂತಹ ಮೌಢ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್‌ಗಳು ಮಾಡಬಾರದು” ಎಂದರು.
ವಾಕ್ ಸ್ವಾತಂತ್ರ್ಯ ಘನತೆಯಿಂದ ಬಳಸಿ
“ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ. ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿ” ಎಂದು ಸಲಹೆ ನೀಡಿದರು.
ನಿರ್ಮಲಾನಂದ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಕೃಷಿ ಸಚಿವ ಚಲುವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.