ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿರುವ ಮಧ್ಯೆಯೇ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದ ವೈದ್ಯರೋರ್ವರು ಕಾರೊಂದರಲ್ಲಿ ಇಂದು(ಡಿ.1) ಶವವಾಗಿ ಪತ್ತೆಯಾಗಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿ ವೈದ್ಯ, ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಡಾ. ಸತೀಶ್ (47) ಶವವಾಗಿ ಪತ್ತೆಯಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಡಾ ಸತೀಶ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವಿಷವನ್ನು ಇಂಜೆಕ್ಷನ್ ಮೂಲಕ ಚುಚ್ಚಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಸಾವಿಗೆ ಸೂಕ್ತವಾದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.
ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣ
ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣದಲ್ಲಿ ಕೂಡ ಡಾ. ಸತೀಶ್ ಅವರ ಹೆಸರು ಕೇಳಿ ಬಂದಿದ್ದವು ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಭ್ರೂಣ ಲಿಂಗ ಪತ್ತೆ ಪ್ರಕರಣ: ಸಿಐಡಿ ತನಿಖೆಗೊಪ್ಪಿಸಿದ ರಾಜ್ಯ ಸರ್ಕಾರ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ(ನ.30) ಮೈಸೂರು ತಾಲೂಕು ವೈದ್ಯಾಧಿಕಾರಿ ಡಾ. ರಾಜೇಶ್ವರಿ ಮತ್ತು ಈ ಹಿಂದೆ ಮೈಸೂರು ಡಿಹೆಚ್‌ಓ ಆಗಿದ್ದ ಡಾ. ರವಿ ಅವರ ಕರ್ತವ್ಯ ಲೋಪದ ಮೇರೆಗೆ ಅಮಾನತು ಮಾಡುವಂತೆ ಆದೇಶಿಸಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದರು.
ಅಲ್ಲದೇ, ಆರೋಗ್ಯ ಸಚಿವರು ಮಂಡ್ಯದ ಆಲೆಮನೆಯಲ್ಲಿ ನಡೆಯುತ್ತಿದ್ದ ದಂಧೆಯ ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ, ಸ್ಥಳೀಯರು ಡಾ.ಸತೀಶ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಈ ವೇಳೆ ಅಧಿಕಾರಿಗಳಿಗೆ ಸತೀಶ್ ಅವರನ್ನು ಕರೆದು ವಿಚಾರಣೆ ನಡೆಸುವಂತೆ ಸಚಿವ ಗುಂಡೂರಾವ್ ಸೂಚಿಸಿದ್ದರು. ಈ ಬೆಳವಣಿಗೆ ನಡೆದ ಮರುದಿನವೇ ಡಾ. ಸತೀಶ್ ಶವವಾಗಿ ಪತ್ತೆಯಾಗಿದ್ದಾರೆ. ಇದು ಇನ್ನಷ್ಟು ಅನುಮಾನಗಳಿಗೆ ಕಾರಣವಾಗಿದೆ.