ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಛತ್ತೀಸ್ಗಢದ ರಾಯ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 196(ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 197 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೇಂದ್ರ ಗೃಹ ಸಚಿವ ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು: ಮಹುವಾ ಮೊಯಿತ್ರಾ
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಪತ್ರಕರ್ತರು ಸಂಸದೆ ಮೊಯಿತ್ರಾಗೆ ರಾಜ್ಯದಲ್ಲಿ ಅಕ್ರಮ ಒಳನುಸುಳುವಿಕೆಯ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ್ದ ಮೊಯಿತ್ರಾ, “ಬಾಂಗ್ಲಾದೇಶದಿಂದ ನುಸುಳುವಿಕೆಯನ್ನು ತಡೆಯುವಲ್ಲಿ ಅಮಿತ್ ಶಾ ವಿಫಲರಾಗಿದ್ದು, ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಮೊಯಿತ್ರಾ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹೇಳಿಕೆಯು ಆಕ್ಷೇಪಾರ್ಹ ಮತ್ತು ಸಂವಿಧಾನಬಾಹಿರ ಎಂದು ದೂರುದಾರ ಗೋಪಾಲ್ ಸಮಂತೋ ಆರೋಪಿಸಿದ್ದಾರೆ. 1971ರಲ್ಲಿ ರಾಯ್ಪುರದ ಮಾನಾ ಕ್ಯಾಂಪ್ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಬಾಂಗ್ಲಾದೇಶಿ ನಿರಾಶ್ರಿತರು ನೆಲೆಸಿದ್ದರು. ಮೊಯಿತ್ರಾ ಅವರ ಹೇಳಿಕೆಯು ಅವರಲ್ಲಿ ಭಯವನ್ನು ಸೃಷ್ಟಿಸಿದೆ. ಏಕೆಂದರೆ ಮೊಯಿತ್ರಾ ಅವರ ಹೇಳಿಕೆಯು ಅವರ ವಿರುದ್ಧ ಆಕ್ರೋಶಕ್ಕೆ ಕಾರಣವಾಗಬಹುದು ಎಂದು ಅಧಿಕಾರಿ ಹೇಳಿದ್ದಾರೆ.
