ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿಂದನೆ ಮಾಡಿದ ಆರೋಪದಲ್ಲಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಎಫ್ಐಆರ್ ದಾಖಲಾಗಿದೆ.
ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಜಾತಿಯ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿದ್ದ ಯತ್ನಾಳ್, “ತಾನು ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂಬುದು ರಾಹುಲ್ ಗಾಂಧಿಗೆ ತಿಳಿದಿಲ್ಲ. ಮುಸ್ಲಿಮರಿಗೆ ಹುಟ್ಟಿದ್ದಾನೋ, ಕ್ರೈಸ್ತರಿಗೆ ಹುಟ್ಟಿದ್ದಾನೋ ಎಂಬ ಬಗ್ಗೆ ತನಿಖೆ ಆಗಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿರುದ್ಧವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಆರ್ಎಸ್ಎಸ್ ಎಚ್ಚರಿಕೆಗೂ ಬಗ್ಗದ ಯತ್ನಾಳ್ ಮಿತ್ರ ಪಡೆ; ಮುಂದುವರೆದ ಬಂಡಾಯ
“ರಾಹುಲ್ ಗಾಂಧಿ ಅವರ ವಿರುದ್ಧ ಅತ್ಯಂತ ಕೀಳು ಹಾಗೂ ವೈಯಕ್ತಿಕ ನಿಂದನೆ ಮಾಡಿರುವ ಹಿನ್ನೆಲೆಯಲಿ ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯತ್ನಾಳ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುತ್ತದೆ. ಹೇಳಿಕೆ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
