ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನ ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಪ್ರಧಾನಿಗೆ ಮಣಿಪುರ ರಾಜ್ಯದ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ ಮೊದಲು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ವಜಾಗೊಳಿಸಲಿ” ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಖರ್ಗೆ, “ಮಣಿಪುರದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಬಿಜೆಪಿ ಸರ್ಕಾರವು ತನ್ನ ಹೀನಾಯ ವೈಫಲ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ” ಎಂದಿದ್ದಾರೆ.
“ಮಣಿಪುರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತಿಮವಾಗಿ ಮೋದಿ ಅವರೊಂದಿಗೆ ಮಾತನಾಡಿದ್ದಾರೆ ಎಂದು ವರದಿಗಳು ಹೇಳುತ್ತವೆ. ಕಳೆದ 55 ದಿನಗಳಿಂದ ಮೋದಿ ಅವರು ಮಣಿಪುರದ ಬಗ್ಗೆ ಒಂದು ಮಾತನ್ನೂ ಆಡಿಲ್ಲ. ಪ್ರತಿಯೊಬ್ಬ ಭಾರತೀಯ ಕೂಡ ಪ್ರಧಾನಿ ಮಾತನಾಡಲು ಕಾಯುತ್ತಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಶ್ರೀ ಸಿಮೆಂಟ್ಸ್‌ನಿಂದ 23 ಸಾವಿರ ಕೋಟಿ ರೂ. ತೆರಿಗೆ ವಂಚನೆ ಆರೋಪ; ಆದಾಯ ತೆರಿಗೆ ಇಲಾಖೆ ಪರಿಶೀಲನೆ
“ಮಣಿಪುರದಲ್ಲಿ ಇದುವರೆಗೆ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಶಾನ್ಯ ರಾಜ್ಯದ ಹಿಂಸಾಚಾರವನ್ನು ಎದುರಿಸುವಲ್ಲಿ ಬಿಜೆಪಿ ಮತ್ತು ಮೋದಿ ಸರ್ಕಾರವು ತಮ್ಮ ವೈಫಲ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಅದೇ ರೀತಿ ಉಗ್ರಗಾಮಿ ಸಂಘಟನೆಗಳು ಮತ್ತು ಸಮಾಜ ವಿರೋಧಿ ಶಕ್ತಿಗಳು ಕದ್ದ ಶಸ್ತ್ರಾಸ್ತ್ರಗಳನ್ನು ಸರ್ಕಾರವು ಮುಟ್ಟುಗೋಲು ಹಾಕಿಕೊಳ್ಳಬೇಕು” ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.
ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಶಾಂತಿ ನೆಲೆಸಲು ಹಲವು ಕ್ರಮಗಳನ್ನು ಸೂಚಿಸಿದ ಖರ್ಗೆ, “ಸರ್ಕಾರವು ಎಲ್ಲ ಪಕ್ಷಗಳೊಂದಿಗೆ ಮಾತುಕತೆ ಆರಂಭಿಸಬೇಕು. ಭದ್ರತಾ ಪಡೆಗಳ ದಿಗ್ಬಂಧನ ಅಂತ್ಯಗೊಳಿಸಿ. ರಾಷ್ಟ್ರೀಯ ಹೆದ್ದಾರಿಗಳನ್ನು ತೆರೆಯುವ ಮತ್ತು ಸುರಕ್ಷಿತವಾಗಿರಿಸುವ ಮೂಲಕ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಲಭ್ಯವಾಗಿಸಬೇಕು. ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿ ಮತ್ತು ಜೀವನೋಪಾಯದ ಪ್ಯಾಕೇಜ್ ಅನ್ನು ವಿಳಂಬವಿಲ್ಲದೆ ಸಿದ್ಧಪಡಿಸಬೇಕು” ಎಂದು ಖರ್ಗೆ ಹೇಳಿದರು.