‘ಸಕಾಲ’ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಸರ್ಕಾರಿ ಸೇವೆಗಳನ್ನು ಅಧಿಕಾರಿಗಳು ವಿಳಂಬವಿಲ್ಲದೆ ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಇಂದು ನಡೆದ ಸಕಾಲ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, “ಸರ್ಕಾರ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಲು ಇರುವ ಏಕೈಕ ಮಾರ್ಗ ಸಕಾಲ. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು, ಜನರಿಗೆ ವಿಳಂಬವಿಲ್ಲದೆ ಎಲ್ಲ ಸೇವೆಗಳೂ ಲಭ್ಯವಾಗುವಂತಿರಬೇಕು ಎಂಬುದೇ ಸರ್ಕಾರ ಉದ್ದೇಶ. ಆದರೆ, ಕೆಲವು ಸೇವೆಗಳು ವಿಳಂಬವಾಗುತ್ತಿರುವುದು ಸರಿಯಲ್ಲ” ಎಂದು ಎಚ್ಚರಿಕೆ ನೀಡಿದರು.
“ಸಕಾಲ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಆದರೆ, ಸುಧಾರಣೆಯಾಗಬೇಕಾದ್ದು ಇನ್ನೂ ಬಹಳಷ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಕಾಲ ಸೇವೆ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ನಮಗೆ ವರ ಕೊಟ್ಟು ಇಲ್ಲಿ ಕೂರಿಸಿದವರನ್ನೇ ಮನೆಯ ಹೊರಗೆ ಕೂರಿಸಿ ಸತಾಯಿಸುವ ಕೆಲಸ ಆಗಬಾರದು. ಸಕಾಲ ಸೇವೆಯನ್ನು ಅಧಿಕಾರಿಗಳು ನಾಮಕಾವಸ್ತೆಯಂತೆ ಹಗುರವಾಗಿ ತೆಗೆದುಕೊಳ್ಳಬಾರದು” ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಸಕಾಲ ಸೇವೆಯನ್ನೂ ಡಿಜಿಟಲೀಕರಣಗೊಳಿಸುವ ಬಗ್ಗೆಯೂ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿ, “ಸಕಾಲ ಕಾಯ್ದೆಯ ಅಡಿಯಲ್ಲಿ 100 ಇಲಾಖೆಗಳಿಂದ ಒಟ್ಟು 1201 ಸೇವೆಗಳನ್ನು ಜನರಿಗೆ ನೀಡಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ 29 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ ಶೇ.5 ರಷ್ಟು ಸೇವೆಗಳನ್ನು ವಿಳಂಬವಾಗಿ ನೀಡಲಾಗಿದೆ. ಶೇ.7ರಷ್ಟು ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಸಕಾಲ ಕಾಯ್ದೆ 5(2) ರ ಪ್ರಕಾರ ಯಾವುದೇ ಅರ್ಜಿಯನ್ನು ತಿರಸ್ಕರಿಸಬೇಕಾದರೆ ಸೂಕ್ತ ಕಾರಣವನ್ನು ನಮೂದಿಸಬೇಕು. ಆದರೆ, ಅನೇಕರು ಈ ನಿಯಮವನ್ನು ಪಾಲಿಸಿಲ್ಲ” ಎಂದು ಅಸಮಾಧಾನ ಹೊರಹಾಕಿದರು.
ಸಭೆಯಲ್ಲಿ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸೇರಿದಂತೆ ಎಲ್ಲಾ ಇಲಾಖೆಯ ಕಾರ್ಯದರ್ಶಿಗಳೂ ಹಾಜರಿದ್ದರು.
ಸಕಾಲಕ್ಕೆ ಮತ್ತಷ್ಟು ಹೊಸ ಸೇವೆ ಸೇರ್ಪಡೆ
ಸಕಾಲ ಕಾಯ್ದೆಯ ಅಡಿಯಲ್ಲಿ ಈಗಾಗಲೇ ಹಲವಾರು ಸೇವೆಗಳನ್ನು ಜನರಿಗೆ ಒದಗಿಸಲಾಗುತ್ತಿದೆ. ಇದರ ಜೊತೆಗೆ ಮತ್ತಷ್ಟು ಸೇವೆಗಳನ್ನು ಹೊಸದಾಗಿ ಸೇರಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಅಧೀನ ಇಲಾಖೆಗಳಾದ ಕರ್ನಾಟಕ ರಾಜ್ಯ ಶುಶ್ರೂಷೆ ಪರಿಷತ್ತು, ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿ, ಕರ್ನಾಟಕ ರಾಜ್ಯ ಶುಶ್ರೂಷೆ ಪರೀಕ್ಷಾ ಮಂಡಳಿ ಹಾಗೂ ರಾಜೀವ್ ಗಾಂದಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 130 ಹೊಸ ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ.
Nana necchina maniya mantri sri Krishna byregowda. Ivarigae Nanna prnamagalu. Devanu avarige mattu avara kutumbakke Aayuru Arogiya mattu ishvariya kodali mattu avara kAayuru Arogiya mattu ishvari.intavaru phuna siguvadu viral. ABDUL HAMID ADVOCATE, HASSAN.