ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ರೂಪಿಸಿದ್ದ ಎರಡು ಯೋಜನೆಗಳಲ್ಲಿ ಶಕ್ತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ. ಈಗ ಮತ್ತೊಂದು ನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭವಾಗಲಿದೆ.
ಕುಟುಂಬದ ಯಜಮಾನಿಗೆ ಮಾಸಿಕ ₹2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯತೆ ಇಲ್ಲ. ಹಾಗಾದರೆ ಯೋಜನೆಯ ಲಾಭ ಪಡೆಯಲು ನೋಂದಣಿ ಮಾಡಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡುವ ‘ಗೃಹಲಕ್ಷ್ಮಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ.
ಯಾರು ಅರ್ಹರು? ಮಾರ್ಗಸೂಚಿಗಳೇನು?
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಅರ್ಜಿಯಲ್ಲಿನ ಅಂಶಗಳ ಬಗ್ಗೆ ನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ, ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಮಾಹಿತಿ ನೀಡಿದೆ.
ಮಾಹಿತಿಗೆ ಸಹಾಯ ವಾಣಿ
ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಈ ಸಂಖ್ಯೆಗೆ ಎಸ್‌ಎಂಎಸ್ ಮಾಡಬಹುದು. ಕೂಡಲೇ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಹೀಗಾಗಿ ಯೋಜನೆಯಲ್ಲಿ ಯಾವುದೇ ಗೊಂದಲ ಇಲ್ಲ. ಯಾವ ಕೇಂದ್ರ, ದಿನಾಂಕ, ಸಮಯ ಎಲ್ಲ ಮಾಹಿತಿಯೂ ಫಲಾನುಭವಿ ಮಹಿಳೆಗೆ ಹೋಗಲಿದೆ. ಇನ್ನೂ ಗೊಂದಲವಿದ್ದರೆ ಇಲಾಖೆ 1902 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಹಣ ಜಮೆ ಯಾವಾಗ?
ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಹಣ ಜಮೆ ಆಗಲಿದೆ. ಯೋಜನೆಗೆ ಚಾಲನೆ ನೀಡಲು ಪಕ್ಷದ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಷ್ಟ್ರೀಯ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಆಗಸ್ಟ್ 16 ಅಥವಾ 17ರಂದು ಯಜಮಾನಿ ಖಾತೆಗೆ ಹಣ ಜಮೆ ಆಗುವ ಸಾಧ್ಯತೆ ಇದೆ.
ಈ ಸುದ್ದಿ ಓದಿದ್ದೀರಾ? ವಿಪಕ್ಷ ನಾಯಕ ಆಯ್ಕೆ | ಕ್ಷಣಕ್ಕೊಂದು ಹೇಳಿಕೆ, ಮನಸಲ್ಲೇ ಮಂಡಿಗೆ ತಿನ್ನುತ್ತಿದ್ದಾರಾ ಕುಮಾರಸ್ವಾಮಿ?
ಪ್ರಜಾಪ್ರತಿನಿಧಿಗಳ ನೇಮಕ
ಗೌರವಧನದ ಆಧಾರದ ಮೇಲೆ ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳನ್ನು ಸರ್ಕಾರ ನೇಮಕ ಮಾಡಿಕೊಂಡಿದೆ. ಒಂದು ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ, ಈ ಕೇಂದ್ರಗಳಲ್ಲಿ ಉಂಟಾಗಬಹುದಾದ ಒತ್ತಡ ತಪ್ಪಿಸುವ ಸಲುವಾಗಿ ಮೊಬೈಲ್ ಆ್ಯಪ್ ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೊಬೈಲ್ ಆ್ಯಪ್ ಮೂಲಕ ಅರ್ಜಿ ಭರ್ತಿ ಮಾಡಿ ಸಲ್ಲಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗಿದೆ.
ಉತ್ತಮ ಬೆಳವಣಿಗೆ
Badavarige Anna, Hasivu Muktha & Badavara Eligege Nintiruv Congress Pakshakke mattu Madamravarige Dhanyavadagalu