ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಿದ್ದು, ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ, ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈಗ ಮೈಸೂರಿನಲ್ಲಿ ಚಾಲನಾ ಕಾರ್ಯಕ್ರಮವನ್ನು ನಿಗದಿ ಮಾಡಲಾಗಿದೆ.
ಕಾರ್ಯಕ್ರಮದ ಸ್ಥಳಾಂತರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜಾರಕಿಹೊಳಿ, “ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ನಾವು ಎಲ್ಲ ಸಿದ್ದತೆ ಮಾಡಿಕೊಂಡಿದ್ದೆವು. ಈಗ, ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಕಾರಣವೇನೆಂದು ತಿಳಿಸಬೇಕು” ಎಂದು ಹೇಳಿದ್ದಾರೆ.
“ಅದೇ ದಿನ ರಾಹುಲ್‌ಗಾಂಧಿ ಅವರು ಕೇರಳದ ವಯನಾಡ್‌ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಹಾಗಾಗಿ, ಅಲ್ಲಿಂದ ಬೆಳಗಾವಿಗೆ ಬರುವುದು ಕಷ್ಟವೆಂದು ಚಾಲನಾ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಾಂತರದ ಅಸಲಿ ಕಾರಣ ತಿಳಿಸಬೇಕು” ಎಂದು ಅವರು ಹೇಳಿದ್ದಾರೆ.
“ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಹಲವರು ಆಕಾಂಕ್ಷಿಗಳಿದ್ದಾರೆ. ಚುನಾವಣೆ ಸಂಬಂಧ ಮುಂದಿನ ತಿಂಗಳು ಸಭೆ ನಡೆಯಲಿದೆ. ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ” ಎಂದು ಅವರು ಹೇಳಿದ್ದಾರೆ.