ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ(ಸೆಪ್ಟೆಂಬರ್ 22) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಔಪಚಾರಿಕವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೇರ್ಪಡೆಗೊಂಡರು.
ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್, ನಿಖಿಲ್ ಕುಮಾರಸ್ವಾಮಿ, ಕುಪೇಂದ್ರ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
ಸೇರ್ಪಡೆ ಕುರಿತು ಘೋಷಣೆ ಮಾಡಿದ ಜೆ ಪಿ ನಡ್ಡಾ ಅವರು, “ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದಕ್ಕೆ ನನಗೆ ಸಂತೋಷವಾಗಿದೆ. ನಾವು ಅವರನ್ನು ಹೃದಯಪೂರ್ವಕವಾಗಿ ಎನ್‌ಡಿಎಗೆ ಸ್ವಾಗತಿಸುತ್ತೇವೆ. ಇದು ಗೌರವಾನ್ವಿತ ಪ್ರಧಾನಮಂತ್ರಿಗಾಗಿ ಹೊಸ ಭಾರತ, ಬಲಿಷ್ಠ ಭಾರತ ನಿರ್ಮಿಸಲು ಎನ್‌ಡಿಎಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ತಿಳಿಸಿದರು.
ಪಕ್ಷದ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ತಮ್ಮ ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಹೇಳಿದಾಗಿನಿಂದ ಉಭಯ ಪಕ್ಷಗಳ ನಡುವಿನ ಮೈತ್ರಿ ಕುರಿತು ಚರ್ಚೆಗಳು ಬೆಳಕಿಗೆ ಬಂದಿವೆ. ಒಟ್ಟು 28 ಲೋಕಸಭಾ ಕ್ಷೇತ್ರಗಳಿರುವ ಕರ್ನಾಟಕದಲ್ಲಿ ಜೆಡಿಎಸ್ 4 ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.
ಈ ಸುದ್ದಿ ಓದಿದ್ದೀರಾ? ಯುಪಿಯ ಸರ್ಕಾರ ಒಬಿಸಿ ಕೋಟಾ ಸೇರಿಸದಿರುವುದಕ್ಕೆ ವಿಷಾದವಿದೆ: ರಾಹುಲ್ ಗಾಂಧಿ
ಆದರೆ, ಈ ಕುರಿತ ಚರ್ಚೆಗಳು ಇನ್ನೂ ಅಂತಿಮ ಹಂತಕ್ಕೆ ಬಂದಿಲ್ಲ ಎಂದಿರುವ ಮಾಜಿ ಸಿಎಂ ಯಡಿಯೂರಪ್ಪ, ಇತರ ಜವಾಬ್ದಾರಿಗಳಲ್ಲಿ ನಿರತರಾಗಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕೆಲವೇ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿದ್ದರು.
ಕರ್ನಾಟಕದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನ, ಕಾಂಗ್ರೆಸ್, ಜೆಡಿಎಸ್ ತಲಾ ಒಂದೊಂದು ಸ್ಥಾನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲದಿಂದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು.
ಈ ವರ್ಷ ಮೇನಲ್ಲಿ ನಡೆದ 224 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿತ್ತು.