ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ.
ಸಿದ್ದರಾಮಯ್ಯ ಅವರು ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಆದರೆ, ಡಿ ಕೆ ಶಿವಕುಮಾರ್ ಅವರು ದೆಹಲಿಗೆ ಹೋಗುವ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ.
ಭಾನುವಾರ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ʼಮುಖ್ಯಮಂತ್ರಿ ಮತ್ತು ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಅಧಿಕಾರ ಎಐಸಿಸಿ ಅಧ್ಯಕ್ಷರಿಗೆ ವಹಿಸಲಾಗಿದೆʼ ಎಂಬ ನಿರ್ಧಾರಕ್ಕೆ ಬರಲಾಗಿತ್ತು.
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಸುಶೀಲ್‌ಕುಮಾ ಶಿಂಧೆ (ಮಾಜಿ ಮುಖ್ಯಮಂತ್ರಿ, ಮಹಾರಾಷ್ಟ್ರ), ಜಿತೇಂದ್ರ ಸಿಂಗ್ (ಎಐಸಿಸಿ ಪ್ರಧಾನ ಕಾರ್ಯದರ್ಶಿ) ಹಾಗೂ ದೀಪಕ್ ಬಬಾರಿಯಾ (ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ) ಅವರನ್ನು ನಿಯೋಜಿಸಿದ್ದರು.
ಈ ಮೂವರ ವೀಕ್ಷರ ತಂಡ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದು, ಸೋಮವಾರ ಹೈಕಮಾಂಡ್ ಮುಂದೆ ಇಡಲಿದೆ. ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಕರೆಯಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ.
ಡಿ ಕೆ ಶಿವಕುಮಾರ್ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ಸಂಭ್ರಮಕ್ಕೆ ಮುಖ್ಯಮಂತ್ರಿ ಸ್ಥಾನದ ಉಡುಗೊರೆಯನ್ನು ಹೈಕಮಾಂಡ್ ನೀಡಲಿದೆ ಎನ್ನುವುದು ಅವರ ಒಳ ಇಂಗಿತ. ಆದರೆ, ಸಿದ್ದರಾಮಯ್ಯ ಪರವಾಗಿ 107 ಶಾಸಕರು ಬಹುಮತ ವ್ಯಕ್ತಪಡಿಸಿದ್ದು, ಅಂತಿಮವಾಗಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಕಾಂಗ್ರೆಸ್‌ನ ಬಹುಪಾಲು ಶಾಸಕರ ನಿರೀಕ್ಷೆ.