ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಹಿಸಿಕೊಂಡಿದ್ದಾರೆ ಎಂದು ಪಕ್ಷದ ಕೇಂದ್ರ ವೀಕ್ಷಕ, ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುಖು, ಪಕ್ಷದ ಶಾಸಕರು ಹಾಗೂ ರಾಜ್ಯ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರೊಂದಿಗೆ ಡಿ.ಕೆ ಶಿವಕುಮಾರ್ ಮತ್ತು ಭೂಪಿಂದರ್ ಹೂಡಾ ಅವರು ಸರಣಿ ಸಭೆಗಳನ್ನು ನಡೆಸಿದ್ದಾರೆ. ಬಳಿಕ ಮಾತನಾಡಿದ ಶಿವಕುಮಾರ್, ‘ಎಲ್ಲ ಭಿನ್ನಾಭಿಪ್ರಾಯಗಳನ್ನು ನಿವಾರಿಸಲಾಗಿದೆ’ ಎಂದು ಹೇಳಿದ್ದಾರೆ.
“ಎಲ್ಲ ಆಂತರಿಕ ವಿಷಯಗಳನ್ನು ಬಗೆಹರಿಸಿಕೊಳ್ಳಲು ಸಮನ್ವಯ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಯಾವುದೇ ನಾಯಕರು ಪತ್ರಿಕಾಗೋಷ್ಠಿ ನಡೆಸಲು ಹೋಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಆ ಆರು ಮಂದಿ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ.