ಬಂಡುಕೋರ ನಾಯಕ ಕೆ ಎಸ್ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘ವೀಕ್ ಪಿಎಂ’ ಅಲ್ಲದೆ ಮತ್ತೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ನಾನು ವೀಕ್ ಪಿಎಂ ಅಲ್ಲ” ಎಂದು ತಿರುಗೇಟು ನೀಡಿದ್ದಾರೆ.
“ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ʼವೀಕ್ ಪಿಎಂʼ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ʼವೀಕ್ ಪಿಎಂʼ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ?” ಎಂದು ಕುಟುಕಿದ್ದಾರೆ.
“ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ “ವೀಕ್ ಪಿಎಂ” ಆಗಿರುವುದಲ್ಲವೇ” ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ
“ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು “ವೀಕ್ ಪಿಎಂ” ಎಂದಿದ್ದಾರೆ.
“ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ಲ” ಎಂದು ಟೀಕಿಸಿದ್ದಾರೆ.
