- ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್ ಪವಾರ್ ಮಾತು
- 2024ರಲ್ಲಿ ನಡೆಯಲಿರುವ ಲೋಕಸಭೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ತಾವು ಪ್ರಧಾನ ಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ ಎಂದು ಹೇಳಿದ್ದಾರೆ.
ಪ್ರತಿಪಕ್ಷಗಳು ದೇಶದ ಒಳಿತಿಗಾಗಿ ಕೆಲಸ ಮಾಡುವ ನಾಯಕತ್ವ ಬಯಸುತ್ತವೆ. ಈ ನಿಟ್ಟಿನಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚೆಗೆ ನಿಧನರಾದ ಪುಣೆ ವಿಶ್ವವಿದ್ಯಾಲಯದ ಉಪಕುಲಪತಿ ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್ ಪವಾರ್ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಪಕ್ಷಗಳು ಒಗ್ಗೂಡಿದರೆ ಯಾರಾದರೂ ಒಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದು ಸ್ವಲ್ಪ ಕಷ್ಟವಾಗುತ್ತದೆ” ಎಂದು ಹೇಳಿದರು.
“ನಾನು ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದ್ದರಿಂದ ನಾನು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ” ಎಂದು ಪವಾರ್ ತಿಳಿಸಿದರು.
ಶರದ್ ಪವಾರ್ ಅವರು ಮಹಾ ವಿಕಾಸ್ ಅಘಾಡಿಯ ಭಾಗವಾಗಿರುವ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಜೊತೆ ಸ್ಥಾನಗಳ ಹಂಚಿಕೆ ಕುರಿತು ಮಾತನಾಡಿ, ”ಇತ್ತೀಚೆಗೆ ನನ್ನ ನಿವಾಸದಲ್ಲಿ ಸಭೆ ನಡೆಸಲಾಗಿದೆ. ಮಹಾ ವಿಕಾಸ್ ಅಘಾಡಿ ನಾಯಕರು ಈ ಬಗ್ಗೆ ನಿರ್ಧರಿಸುತ್ತಾರೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!
“ಉದ್ಧವ್ ಠಾಕ್ರೆ, ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾನು ಒಟ್ಟಿಗೆ ಕುಳಿತು ಸ್ಥಾನಗಳ ಹಂಚಿಕೆ ಬಗ್ಗೆ ಹೆಚ್ಚಿನ ಚರ್ಚೆ ನಡೆಸುತ್ತೇವೆ” ಎಂದು ಶರದ್ ಪವಾರ್ ತಿಳಿಸಿದ್ದಾರೆ.
2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮುಂದಿನ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯೂ ನಡೆಯಲಿದೆ.
ಅನೇಕ ರಾಜ್ಯಗಳ ವಿಧಾನಸಭೆ ಚುನಾವಣೆಯು ಈ ವರ್ಷ ನಡೆಯುತ್ತಿದೆ. ಈ ಚುನಾವಣೆಗಳಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಪ್ರತಿಪಕ್ಷಗಳನ್ನು ಒಂದುಗೂಡಿಸಲು ಪವಾರ್ ಸಹ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ನಾಯಕರು ಹಾಗೂ ಇತರ ಪಕ್ಷಗಳ ನಾಯಕರೊಂದಿಗೆ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ