- ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನದಲ್ಲಿ ಮುಖ್ಯಮಂತ್ರಿ
- ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚಳ : ಸಿಎಂ ಸಿದ್ದರಾಮಯ್ಯ ವಿಷಾದ
‘ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ’ ಎನ್ನುವ ಮೌಢ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಸಲ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದೇನೆ. ಇಂತಹ ಮೌಢ್ಯದ ವಿರುದ್ಧ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣನವರು 12ನೇ ಶತಮಾನದಲ್ಲೇ ಮೌಢ್ಯ ಮತ್ತು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಢ್ಯ ಎಲ್ಲವೂ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಿಸಿದರು.
ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ನಾನು ಸಿದ್ದರಾಮಯ್ಯರ ಅಭಿಮಾನಿ, ಅವರ ಶಿಷ್ಯ; ಬಿಜೆಪಿ ನಾಯಕ ಎಸ್ ಟಿ ಸೋಮಶೇಖರ್ ಅಚ್ಚರಿಯ ಹೇಳಿಕೆ
ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ಎಲ್ಲ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನಮಾನ ಕಲ್ಪಿಸುವ ಆಶಯ ಆಗಿನ ಪಾರ್ಲಿಮೆಂಟ್ ಆಗಿದ್ದ ಅನುಭವ ಮಂಟಪಕ್ಕೆ ಇತ್ತು. ಇದೇ ಆಶಯ ನಮ್ಮ ಸರ್ಕಾರದ್ದೂ ಆಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ಶಾಸಕ ಶ್ರೀನಿವಾಸ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಕೊಂಡಜ್ಜಿ ಮೋಹನ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ.