300ಕ್ಕೂ ಹೆಚ್ಚು ಸ್ಥಾನ ಗೆದ್ದು ‘ಇಂಡಿಯಾ ಮೈತ್ರಿಕೂಟ’ ಸರ್ಕಾರ ರಚಿಸಲಿದೆ: ಲಕ್ನೋದಲ್ಲಿ ಡಿಸಿಎಂ ಡಿಕೆಶಿ ವಿಶ್ವಾಸ

Date:

Advertisements

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಮಾಧ್ಯಮಗೋಷ್ಠಿ ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, “ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು” ಎಂದರು.

“ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಿಸಿದೆವು. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದೇವೆ. ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆ ಘೋಷಿಸಿದೆವು” ಎಂದು ಹೇಳಿದರು.

Advertisements

“ಕರ್ನಾಟಕದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಮೂಲಕ 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ತೆಲಂಗಾಣ ಚುನಾವಣೆದಲ್ಲೂ 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಆ ಪೈಕಿ ಬಹುತೇಕ ಜಾರಿಯಾಗಿವೆ. ಕೆಲವು ಜಾರಿ ಪ್ರಕ್ರಿಯೆಯಲ್ಲಿವೆ” ಎಂದು ತಿಳಿಸಿದರು.

ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ

“ಬಿಜೆಪಿ 10 ವರ್ಷಗಳ ಹಿಂದೆ ಕಪ್ಪು ಹಣ ತಂದು ಜನರ ಖಾತೆಗೆ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಅವರು ಕೊಟ್ಟ ಭರವಸೆಗಳನ್ನು ಈಡೇರಿಸಲಿಲ್ಲ. ಬಿಜೆಪಿ ಕೇವಲ ಭಾವನಾತ್ಮಕ ರಾಜಕೀಯ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಜನಸಾಮಾನ್ಯರ ಹಸಿವು ನೀಗಿಸಲು, ಅವರ ಸಂಕಷ್ಟಗಳಿಗೆ ಪರಿಹಾರ ನೀಡಲು ಇಂತಹ ಒಂದೇ ಒಂದು ಯೋಜನೆ ನೀಡಿದ್ದೀರಾ ಎಂದು ಪ್ರಧಾನಮಂತ್ರಿಗಳು, ಅವರ ಪಕ್ಷದ ನಾಯಕರು ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಕೇಳಬಯಸುತ್ತೇನೆ” ಎಂದರು.

ಕಾಂಗ್ರೆಸ್ ಗ್ಯಾರಂಟಿ ಜಾರಿಯಾಗಲಿವೆ

“ಕಾಂಗ್ರೆಸ್ ಐದು ನ್ಯಾಯ ಯೋಜನೆಗಳ ಮೂಲಕ ಒಟ್ಟಾರೆ 25 ಗ್ಯಾರಂಟಿಗಳನ್ನು ಪ್ರಕಟಿಸಿದ್ದು, ಮಹಾಲಕ್ಷ್ಮಿ ಯೋಜನೆ ಮೂಲಕ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ ಒಂದು ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ, ನರೇಗಾ ಕೂಲಿ 400 ರೂ.ಗೆ ಏರಿಕೆ, ನಗರ ಪ್ರದೇಶದಲ್ಲಿ ಉದ್ಯೋಗ ಖಾತ್ರಿ, 25 ಲಕ್ಷ ವರೆಗಿನ ಆರೋಗ್ಯ ವಿಮೆ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ” ಎಂದು ಹೇಳಿದರು.

“ಮೋದಿ ಅವರು ಮಂಗಳಸೂತ್ರದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ 25 ಸಾವಿರ ಇತ್ತು. ಈಗ 10 ವರ್ಷಗಳ ನಂತರ ಅದು 75 ಸಾವಿರಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಮಹಿಳೆಯರು ಮಂಗಳಸೂತ್ರ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿಗಳ ಹೇಳಿಕೆ ನಿಜಕ್ಕೂ ಖಂಡನೀಯ” ಎಂದರು.

“ಈ ಬಾರಿಯ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರರಲಿದ್ದು, ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಅವರ ಎನ್ ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಇಂಡಿಯಾ ಮೈತ್ರಿಕೂಟ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಯಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್ ಸ್ವೀಪ್ ಮಾಡಲಿದೆ. ಈ ದೇಶ ಹಾಗೂ ಜನರ ಕಲ್ಯಾಣಕ್ಕೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ವಿಚಾರವಾಗಿ ಕೇಳಿದಾಗ, “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಈ ಪ್ರಕರಣ ಇಡೀ ದೇಶವೇ ತಲೆತಗ್ಗಿಸುಂವತೆ ಮಾಡಿದೆ. ಬಿಜೆಪಿ ಸ್ನೇಹಿತರು, ಯ ಎನ್ ಡಿಎ ಮೈತ್ರಿಕೂಟದ ಪಕ್ಷದ ಸಂಸದನಿಂದ ಈ ಕೃತ್ಯ ನಡೆದಿದ್ದು, ಈ ಪ್ರಕರಣದಲ್ಲಿ ಮೋದಿ ಅವರು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದ್ದಾರೆ. ಕೇಂದ್ರ ಸರ್ಕಾರ ಆತನಿಗೆ ಪಾಸ್ ಪೋರ್ಟ್ ವಿತರಣೆ ಮಾಡಿದೆ. ನಾವು ಬ್ಲ್ಯೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದು, ಆತನನ್ನು ಬಂಧಿಸುತ್ತೇವೆ” ಎಂದು ತಿಳಿಸಿದರು.

ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಪ್ರಧಾನ ಮಂತ್ರಿಗಳು ಮುಸ್ಲಿಂ ಮೀಸಲಾತಿ ವಿಚಾರವಾಗಿ ಮಾಡುತ್ತಿರುವ ಆರೋಪ ಆಧಾರರಹಿತವಾಗಿದೆ. ಮುಸಲ್ಮಾನರಿಗೆ ಕಳೆದ 30-40 ವರ್ಷಗಳಿಂದ ಮೀಸಲಾತಿ ನೀಡಲಾಗಿದೆ. ರಾಜಕೀಯ ಉದ್ದೇಶಕ್ಕೆ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವೆಲ್ಲರೂ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಎಲ್ಲಾ ವರ್ಗದ ಜನರ ರಕ್ಷಣೆ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ಹೀಗಾಗಿ ನಾವು ಎಲ್ಲಾ ವರ್ಗದ ಜನರ ರಕ್ಷಣೆ ಮಾಡಲು ಬದ್ಧವಾಗಿದ್ದೇವೆ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X