ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷಾ ವರದಿ ಸಲ್ಲಿಕೆಗೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರದ ಓದನಹಳ್ಳಿಯ ವಕೀಲ ಓ.ಕೆ.ರಘು ಎಂಬುವವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ರಘು ಪರ ವಕೀಲ ಅಭಿಷೇಕ್ ಕುಮಾರ್, ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಅರ್ಜಿಯನ್ನು ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದರು.
ಮಧ್ಯಂತರ ಅರ್ಜಿಯಲ್ಲಿ, ‘ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆ ಆಗಲಿದೆ. ಹೀಗಾಗಿ ಕಾಂತರಾಜ ವರದಿ ಮಂಡಿಸಲು ಮುಂದಾಗಿದ್ದಾರೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ. ಹಾಗಾಗಿ ವರದಿ ಬಹಿರಂಗವಾಗಲು ಅವಕಾಶ ನೀಡದಂತೆ ನಿರ್ಬಂಧಿಸಬೇಕು’ ಎಂದು ಮನವಿ ಮಾಡಲಾಗಿದೆ.
ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ
ಜಾತಿಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.
