ಒಳಮೀಸಲಾತಿ‌ | ವಿರೋಧವಿದ್ದರೆ ಬಹಿರಂಗವಾಗಿಯೇ ಹೇಳುತ್ತಿದ್ದೆವು, ನಮಗೆ ಆ ಉದ್ದೇಶವಿಲ್ಲ: ಪರಮೇಶ್ವರ್

Date:

Advertisements

ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ. ಒಂದು ವೇಳೆ ನಾವು ವಿರೋಧಿಸುವುದಾದರೆ ಬಹಿರಂಗವಾಗಿ ಹೇಳುತ್ತೇವೆ. ಯಾರಿಗೋ ಹೆದರಿಕೊಂಡು ಒಪ್ಪಿಕೊಳ್ಳುತ್ತಿಲ್ಲ” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ‌ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ನಾನು ಒಳಮೀಸಲಾತಿಗೆ ವಿರುದ್ಧವಾಗಿದ್ದಾರೆ, ಸಹಕರಿಸುತ್ತಿಲ್ಲ ಎಂದು ಕೆಲ ಕಿಡಿಗೇಡಿಗಳು ಆರೋಪಿಸುತ್ತಿದ್ದಾರೆ. ಅನವಶ್ಯಕವಾಗಿ ನಮ್ಮ ಹೆಸರುಗಳನ್ನು ತರುವುದು ಸರಿಯಲ್ಲ” ಎಂದರು.

“ಒಳಮೀಸಲಾತಿ ವಿಚಾರವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ನೇರವಾಗಿ ಚರ್ಚಿಸಿದ್ದೇನೆ. ಹೆಚ್.ಸಿ.ಮಹದೇವಪ್ಪ ಸೇರಿದಂತೆ ಅನೇಕರೊಂದಿಗೆ ಮಾತನಾಡಿದ್ದೇನೆ. ಒಳಮೀಸಲಾತಿ ಜಾರಿಗೆ ವಿರುದ್ಧವಾಗಿದ್ದೇವೆ ಎಂದು ಆರೋಪ‌ ಮಾಡಿರುವುದು ಸತ್ಯಕ್ಕೆ ದೂರವಾದುದು. ಇನ್ನು ಮುಂದಾದರೂ ಈ ರೀತಿಯಾಗಿ ಮಾತನಾಡುವುದನ್ನು ನಿಲ್ಲಿಸಲಿ” ಎಂದು ಹೇಳಿದರು‌.

Advertisements

“ಒಳಮೀಸಲಾತಿ ಜಾರಿಗೆ ನಾವೆಲ್ಲ‌ ಒಮ್ಮತದ ನಿರ್ಣಯವನ್ನು ತೆಗೆದುಕೊಂಡಿದ್ದೇವೆ. ಒಂದು ವೇಳೆ ನಾವು ವಿರೋಧಿಸುವುದಾದರೆ ಬಹಿರಂಗವಾಗಿ ಹೇಳುತ್ತೇವೆ. ಯಾರಿಗೋ ಹೆದರಿಕೊಂಡು ಒಪ್ಪಿಕೊಳ್ಳುತ್ತಿಲ್ಲ. ಎಲ್ಲರು ಸಮಾನವಾಗಿ ಅಭಿವೃದ್ಧಿ ಹೊಂದಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಪರಿಶಿಷ್ಟ ವರ್ಗದ ಎಲ್ಲ ಶಾಸಕರೊಂದಿಗೆ ಸಭೆ ಮಾಡಿದ್ದೇನೆ. ಹಿಂದೆ ಕೆಲವರು ಒಳಮೀಸಲಾತಿ ಬೇಡ ಎಂಬ ಮಾತುಗಳನ್ನು ಆಡುತ್ತಿದ್ದರು. ಮೊನ್ನೆ ನಡೆದ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ನಮ್ಮದು ತಕರಾರು ಇಲ್ಲ. ಆದರೆ, ಅಂಕಿ-ಅಂಶಗಳು ಸರಿಯಾಗಿಲ್ಲ‌ ಎಂಬುದನ್ನು ತಿಳಿಸಿದ್ದರು‌. ಡೇಟಾ ಸರಿಯಾಗಿ‌ ಇಲ್ಲದೆ ಇರುವಾಗ ಜಾರಿಯಾದರೆ ತೊಂದರೆಯಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳ ಮೀಸಲಾತಿ ತೀರ್ಮಾನ: ಹೋರಾಟಕ್ಕೆ ಸಂದ ಜಯ, ಕಾಯಿಸದಿರಲಿ ಸರ್ಕಾರ

“ನಾನು ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಮುಂಬೈಗೆ ಹೋಗಿದ್ದರಿಂದ ಕ್ಯಾಬಿನೆಟ್‌ಗೆ ಹಾಜರಾಗಲು ಆಗಲಿಲ್ಲ. ಒಳಮೀಸಲಾತಿಗೆ ಸಮಿತಿ ಮಾಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ, ಮೂರು ತಿಂಗಳ ಗಡವು ನೀಡಿರುವುದು ಮಹತ್ವವಾದದ್ದು. ಒಳಮೀಸಲಾತಿಗೆ ಎಲ್ಲರೂ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದರು.

“ಒಳಮೀಸಲಾತಿ ಮಾಡಿರುವುದು ಸರಿಯಿಲ್ಲ ಎಂದು ಬಿಜೆಪಿಯವರು ಆರೋಪಿಸಲಿ ಸಂತೋಷ. ಆದರೆ, ಯಾರೋ ಕೆಲವರು, ನಾವು ಒಳಮೀಸಲಾತಿ ವಿರುದ್ಧ ಇದ್ದೇವೆ ಎಂದು ಹೇಳುವುದು ಸರಿಯಲ್ಲ. ಪರಿಶಿಷ್ಟ ವರ್ಗಗಳ ಜಾತಿಗಳ ಬಗ್ಗೆ ಸ್ಪಷ್ಟವಾದ ಅಂಕಿ-ಅಂಶ ಇಲ್ಲ. ಜಾತಿಗಣತಿಯಲ್ಲಿ ಆ ರೀತಿಯ ಅಂಕಿ-ಅಂಶ ಇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಡೇಟಾ ಇದ್ದರೆ ಉಪಯೋಗಕ್ಕೆ ಬರುತ್ತದೆ. ಸಮಿತಿಯವರು ತೆಗೆದುಕೊಳ್ಳುತ್ತಾರೆ” ಎಂದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, “ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೈತ್ರಿಯಾಗಿ ಸ್ಪರ್ಧಿಸುತ್ತಿದೆ.‌ ಒಟ್ಟು 288 ಕ್ಷೇತ್ರಗಳ ಪೈಕಿ 103 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸುತ್ತಿದ್ದು, ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷ ಸ್ಪರ್ಧಿಸುತ್ತಿದೆ. ಹೆಚ್ಚು ಸೀಟುಗಳನ್ನು ಗೆದ್ದು ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ರಚನೆಯಾಗುತ್ತದೆ” ಎಂದು ಹೇಳಿದರು.

ಮಹಾರಾಷ್ಟ್ರ ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ ಇದೆ.‌ಅಲ್ಲದೇ ಸರ್ಕಾರ ಜನಪರವಾಗಿರಲಿಲ್ಲ. ಸರ್ಕಾರ ಮತ್ತು ಮುಖ್ಯಮಂತ್ರಿಯವರ ಮೇಲೆ ಭ್ರಷ್ಟಚಾರ ಆರೋಪಗಳು ಕೇಳಿಬಂದಿವೆ. ಮಹಾರಾಷ್ಟ್ರದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು‌ ಆಗಿಲ್ಲ ಎಂದ ಅವರು. ಅಶೋಕ್ ಗೆಹ್ಲೋಟ್ ಅವರಿಗು ಮತ್ತು ನನಗೆ ಮಹಾರಾಷ್ಟ್ರ ಮತ್ತು ಕೊಂಕಣ್ ಪ್ರದೇಶಕ್ಕೆ ಹಿರಿಯ ವೀಕ್ಷಕರ ಜವಾಬ್ದಾರಿಯನ್ನು ಪಕ್ಷ ವಹಿಸಿದೆ. ನಮ್ಮ‌ಪಕ್ಷ ಸ್ಪರ್ಧಿಸಿದ ಎಲ್ಲ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸದ ಅಲೆ‌ ಇದೆ. ರಾಜ್ಯದಲ್ಲಿನ ಮೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೇಳಿದರು.

ವಕ್ಫ್ ಬೋರ್ಡ್‌ನವರು ಜಿಲ್ಲಾಧಿಕಾರಿಗಳ ಮುಖಾಂತರ ನೋಟಿಸ್ ನೀಡಿಸಿದ್ದಾರೆ. ನೋಟಿಸ್ ವಾಪಸ್ ಪಡೆಯಿರಿ, ಈ ಬಗ್ಗೆ ಪರಿಶೀಲಿಸೋಣ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ವಿಷಯ ಇಲ್ಲಿಗೆ ಮುಗಿದಿದೆ. ಪರಿಶೀಲನೆ ಮಾಡುವರೆಗೂ ಯಾವುದೇ ರೈತರಿಗು ನೋಟಿಸ್ ನೀಡುವುದು ಬೇಡ ಎಂದು ಮುಖ್ಯಮಂತ್ರಿಯವರು ಸ್ಪಷ್ಟಪಡಿಸಿದ್ದಾರೆ‌. ಈ ವಿಚಾರಕ್ಕೆ ಬಿಜೆಪಿಯವರು ಇಲ್ಲದಿರುವ ಬಣ್ಣಕಟ್ಟಿ ದೊಡ್ಡ ವಿಷಯ ಮಾಡಲು ಹೊರಟಿದ್ದಾರೆ. ಆಡಳಿತಾತ್ಮಕವಾಗಿ ನೋಟಿಸ್ ಹೋಗಿದೆ. ಅದನ್ನು ವಾಪಸ್ ಪಡೆಯಲಾಗುವುದು.‌ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ಹೇಳಲಾಗಿದೆ ಎಂದರು.

ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗ ಸೇರಿದಂತೆ ಯಾವುದೇ ಸಮುದಾಯ ಸರ್ಕಾರದಿಂದ ಒಂದಷ್ಟು ಸಹಾಯ ಬಯಸುತ್ತದೆ. ಬಿಜೆಪಿಯವರಿಗೆ ಇದನ್ನು ಸಹಿಸಲು ಆಗುವುದಿಲ್ಲ. ಆ ಸಮುದಾಯಗಳು ಹಾಗೆಯೇ ಇರಬೇಕು. ಇವರು ಮಾತ್ರ ಚೆನ್ನಾಗಿರಬೇಕು ಎಂಬ ತತ್ವದವರು ಎಂದು ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X