ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಒದಗಿಸುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಗಿಸಿರುವ ಸುಪ್ರೀಂ ಕೋರ್ಟ್, ತೀರ್ಪು ಕಾಯ್ದಿರಿಸಿದೆ.
ಆಗಸ್ಟ್ 2ರಿಂದ ಸೋಮವಾರ ಮತ್ತು ಶುಕ್ರವಾರ ಹೊರತುಪಡಿಸಿ ಪ್ರತಿದಿನದಂತೆ ಒಟ್ಟು 16 ದಿನಗಳ ವಿಚಾರಣೆ ನಡೆಸಿದ ಬಳಿಕ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ತೀರ್ಪು ಕಾಯ್ದಿರಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಸಂವಿಧಾನ ಪೀಠವು ಎಲ್ಲ ಅರ್ಜಿಗಳ ವಿಚಾರಣೆ ನಡೆಸಿದೆ.
ಭಾರತದ ಬಾಹ್ಯ ಸಾರ್ವಭೌಮತ್ವವು ಪ್ರತ್ಯೇಕವಾಗಿ ಕೇಂದ್ರ ಸರ್ಕಾರದ ಬಳಿ ಇದ್ದು, ಆಂತರಿಕ ಸಾರ್ವಭೌಮತ್ವವನ್ನು ಆಯಾ ರಾಜ್ಯದ ಸರ್ಕಾರಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ನಡೆದಿದ್ದ ವಿಚಾರಣೆ ವೇಳೆ ಮೌಖಿಕವಾಗಿ ತಿಳಿಸಿತ್ತು.

ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳು
ಸಂವಿಧಾನದ 370ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಆಗಸ್ಟ್ 05, 2019ರಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಹಿಂಪಡೆದಿತ್ತು. ಬಳಿಕ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ನಿರ್ಧಾರವನ್ನು ಕೈಗೊಂಡಿತ್ತು. ಇದನ್ನು ಪ್ರಶ್ನಿಸಿ ಸುಮಾರು 20ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಕೆಯಾಗಿದ್ದವು.
2019ರಿಂದ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಮಾರು ಮೂರು ವರ್ಷಗಳ ನಂತರ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.