“ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ದಿನಾಂಕ ನಿಗದಿಪಡಿಸಲಾಗುವುದು” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
14 ಅಕಾಡೆಮಿ ಮತ್ತು 4 ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜತೆ ಮೊದಲ ಬಾರಿಗೆ ಸಚಿವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಸಿದರು.
ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳಿವೆ. ಅದನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆಗೆ ಚರ್ಚಿಸಿ, ಎಲ್ಲವನ್ನೂ ಬಗೆಹರಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.
‘ವಿಶ್ವ ಸಮ್ಮೇಳನ’ದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, “ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ಕೂಡ ನಮಗೂ ಇರಾದೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
“ನೂತನ ಅಕಾಡೆಮಿಗಳ ಅಧ್ಯಕ್ಷರುಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದ್ದು, ಅಕಾಡೆಮಿಗಳಿಗೆ ಅಗತ್ಯವಿರುವ ಅನುದಾನ ನೀಡಲಾಗುವುದು” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.
“ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಅಕಾಡೆಮಿ, ಪ್ರಾಧಿಕಾರದ ನೂತನ ಅಧ್ಯಕ್ಷರು ಮತ್ತು ಸದಸ್ಯರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲರೊಂದಿಗೆ ಸಭೆ ನಡೆಸಿದ್ದೇನೆ. ಪ್ರತಿ ತಿಂಗಳು ಎರಡು ಅಕಾಡೆಮಿಗಳ ಕಾರ್ಯ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುತ್ತದೆ. ಅಲ್ಲದೆ, ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ನ್ಯಾಯ ಪಾಲನೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮುಕ್ತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದೇನೆ” ಎಂದು ಶಿವರಾಜ್ ತಂಗಡಗಿ ತಿಳಿಸಿದರು.
“ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಯಲ್ಲಿ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜೀಯಾಗದೆ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ. ಒಟ್ಟಾರೆ ಎಲ್ಲಾ ಅಕಾಡೆಮಿಗಳು ಚುರುಕಾಗಿ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ” ಎಂದು ಸಚಿವರು ವಿವರಿಸಿದರು.
ಇದನ್ನು ಓದಿದ್ದೀರಾ? ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ!
“ನೂತನವಾಗಿ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಹಲವು ಹಿರಿಯರು ಸಲಹೆಗಳನ್ನು ನೀಡಿದ್ದು, ಎಲ್ಲರನ್ನು ಒಟ್ಟಾಗಿ ಕರೆದೊಯ್ಯಲಾಗುವುದು. ಎಲ್ಲರೂ ಇಲಾಖೆ ಮತ್ತು ಸರ್ಕಾರದ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ” ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು.
